Advertisement

ಬೀದರ-ಔರಾದ್‌ ಹೆದ್ದಾರಿ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ

06:34 PM Sep 22, 2020 | Suhan S |

ಬೀದರ: ಬೀದರ-ಔರಾದ ಹೆದ್ದಾರಿ ದುರಸ್ತಿಗಾಗಿ 1.10 ಕೋಟಿ ರೂ. ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.

Advertisement

ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಕೆಲವು ದಿನಗಳಿಂದ ಸಾಕಷ್ಟು ಹಾಳಾಗಿತ್ತು. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ವಾಹನ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿರುವುದನ್ನು ಗಮನಿಸಿದ್ದೇನೆ. ಈ ಕುರಿತು ಜನರಿಂದಲೂ ಸಾಕಷ್ಟು ದೂರುಗಳು ಬಂದಿವೆ. ಸದರಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈಗಾಗಲೇ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ವಿಳಂಬವಾಗುತ್ತಿದೆ. ಸಮಸ್ಯೆ ಇತರ್ಥ್ಯಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗದಂತೆ ರಸ್ತೆಯ ದುರಸ್ತಿಗೆ ತಕ್ಷಣ ಕ್ರಮ ಜರುಗಿಸು ವಂತೆ ಸಂಸದ ಭಗವಂತ ಖೂಬಾ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಸಂಸದರು ಕೂಡ ವೈಯಕ್ತಿಕ ಮುತುವರ್ಜಿ ವಹಿಸಿ ರಸ್ತೆ ದುರಸ್ತಿಗೆ ಶೀಘ್ರ ಅನುದಾನ ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರ ಗಮನ ಸೆಳೆದಿದ್ದಾರೆ. ಹೀಗಾಗಿ ರಸ್ತೆ ಹಾಗೂ ಸೇತುವೆ ದುರಸ್ತಿಗೆ ಆದಷ್ಟು ಶೀಘ್ರ ಅನುದಾನ ಬಿಡುಗಡೆಯಾಗಿ ಕಾಮಗಾರಿ ಪ್ರಾರಂಭಿಸಲಾಗುವುದೆಂದು ತಿಳಿಸಿದ್ದಾರೆ.

ಸದ್ಯ ಕೌಠಾ ಸೇತುವೆಯ ಮೇಲೆ ಭಾರೀ ವಾಹನಗಳ ಸಂಚಾರ ನಿಷೇಧಿ ಸಲಾಗಿದೆ. ಕೌಠಾ ಸೇತುವೆಗೆ ಹೆಚ್ಚು ನೀರು ಹರಿದು ಬಂದರೆ ಆಗುವ ಅನಾಹುತ ತಪ್ಪಿಸಲು ಮುಂಜಾಗ್ರತೆ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈಗಾಗಲೇ ಸಲ್ಲಿಸಿರುವ ಪ್ರಸ್ತಾವನೆಗೆ ಬೇಗ ಮಂಜೂರಾತಿ ಸಿಗುವ ನಿಟ್ಟಿನಲ್ಲಿ ಸಂಸದರು ಪ್ರಯತ್ನಿಸುತ್ತಿದ್ದಾರೆ. ಮಂಜೂರಾತಿ ಬೇಗ ಸಿಕ್ಕು ಕಾಮಗಾರಿಯನ್ನು ಆದಷ್ಟು ಶೀಘ್ರ ಪ್ರಾರಂಭ ಮಾಡಲಾಗುವುದೆಂದು ಸಚಿವರು ಹೇಳಿದ್ದಾರೆ.

………………………………………………………………………………………………………………………………………………………

Advertisement

ಅಂಗನವಾಡಿಗಳಲ್ಲೇ ಎಲ್‌ಕೆಜಿ,ಯುಕೆಜಿ ಆರಂಭಿಸಲು ಮನವಿ :

ಬೀದರ: ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್‌ ವತಿಯಿಂದ ನಗರದಲ್ಲಿ ಪ್ರತಿಭಟನಾರ್ಯಾಲಿ ನಡೆಸಲಾಯಿತು.

ಜಿಲ್ಲಾ ಸಂಚಾಲಕ ಶಿವರಾಜ ಕಟಗಿ ನೇತೃತ್ವದಲ್ಲಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಗರದ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಜಿಲ್ಲಾಡಳಿತ ಅಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲು ಸರ್ಕಾರ ನಿರ್ಧಾರ ಕೈಗೊಂಡಿದ್ದು, ಇದರಿಂದ ಅಂಗನವಾಡಿಗೆ ಬರುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತದೆ. ಹಾಗಾಗಿ ಅಂಗನವಾಡಿ ಕೇಂದ್ರಗಳ ಹಿತ ಕಾಪಾಡಲು ಎಲ್‌ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಅಂಗನವಾಡಿ ಕೇಂದ್ರಗಳಲ್ಲೇ ಆರಂಭಿಸಬೇಕು. ಇದಕ್ಕಾಗಿ ಕಾರ್ಯಕರ್ತೆಯರಿಗೆ ತರಬೇತಿ ನೀಡಿ ಪಠ್ಯಪುಸ್ತಕ ಒದಗಿಸಬೇಕು ಎಂದು ಆಗ್ರಹಿಸಿದರು. ಸೇವಾ ಹಿರಿತನದ ಆಧಾರದ ಮೇಲೆ ವೇತನ ನೀಡಬೇಕು, ಇಎಸ್‌ಐ ಹಾಗೂ ಭವಿಷ್ಯನಿಧಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next