Advertisement

ನೇಕಾರರ ಸಮುದಾಯಗಳ ಒಕ್ಕೂಟದಿಂದ ಸಿಎಂ ಭೇಟಿ

09:43 PM Jul 24, 2023 | Team Udayavani |

ಬೆಂಗಳೂರು: ನೇಕಾರರ ವಿಶೇಷ ಯೋಜನೆಯಡಿ ಪ್ರಸ್ತುತ ಜಾರಿಯಲ್ಲಿರುವ 20 ಎಚ್‌.ಪಿ.ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ವಿದ್ಯುತ್‌ ಮಗ್ಗದ ಘಟಕಗಳಿಗೆ ಪ್ರತಿ ಯೂನಿಟ್‌ಗೆ 1.25 ರೂ. ದರದಲ್ಲಿ ವಿದ್ಯುತ್‌ ಪೂರೈಕೆ ಯೋಜನೆ ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

Advertisement

ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ ತಮ್ಮನ್ನು ಭೇಟಿಯಾದ ನೇಕಾರರ ಸಮುದಾಯಗಳ ಒಕ್ಕೂಟದ ನಿಯೋಗದ ಬೇಡಿಕೆಗಳಿಗೆ ಸ್ಪಂದಿಸಿದ ಅವರು, ರಿಯಾಯ್ತಿ ದರದಲ್ಲಿ ವಿದ್ಯುತ್‌ ಪೂರೈಕೆ ಜತೆಗೆ 10 ಎಚ್‌.ಪಿ.ವರೆಗಿನ ಘಟಕಗಳಿಗೆ 250 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಒದಗಿಸಲು ಬಜೆಟ್‌ನಲ್ಲಿ ಘೋಷಿಸಲಾಗಿದ್ದು, ಶೀಘ್ರ ಈ ಸಂಬಂಧ ಆದೇಶ ಹೊರಡಿಸಲಾಗುವುದು. ಅಷ್ಟೇ ಅಲ್ಲ, ಇದಲ್ಲದೆ ಹಿಂದುಳಿದ ವರ್ಗಗಳ 2ಎ ವರ್ಗದಡಿ ಬರುವ ಸಮುದಾಯಗಳ ಗುತ್ತಿಗೆದಾರರಿಗೆ 1 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ಘೋಷಿಸಲಾಗಿದೆ ಎಂದೂ ತಿಳಿಸಿದರು.

ರಾಜಕೀಯ ಪ್ರಾತಿನಿಧ್ಯಕ್ಕೆ ಆಗ್ರಹ: ಮುಖ್ಯಮಂತ್ರಿ ಭೇಟಿಯಾದ ನೇಕಾರ ಸಮುದಾಯದ ಮುಖಂಡರು, ತಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವಂತೆ ಮನವಿ ಮಾಡಿದರು. ಒಕ್ಕೂಟಕ್ಕೆ ಬೆಂಗಳೂರು ಮಹಾನಗರದಲ್ಲಿ ನಿವೇಶನ ನೀಡುವುದು, ಕಾಂತರಾಜ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್‌.ಎಂ. ರೇವಣ್ಣ, ಹಂಪಿ ಗಾಯತ್ರಿ ಪೀಠದ ದಯಾನಂದಪುರಿ ಸ್ವಾಮೀಜಿ, ತಪಸಿಹಳ್ಳಿ ದಿವ್ಯಜ್ಞಾನಾನಂದ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ನೀರಲಕೇರಿ ಸಿದ್ಧಾರೂಢ ಮಠದ ಘನಲಿಂಗ ಸ್ವಾಮೀಜಿ, ಧಾರವಾಡದ ಶಿವಾನಂದ ಮಠದ ಶಿವಾನಂದ ಸ್ವಾಮೀಜಿ, ರಾಜ್ಯ ನೇಕಾರರ ಸಮುದಾಯಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಬಿ.ಎಸ್‌. ಸೋಮಶೇಖರ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next