ಮುಂಬೈ; ಮಹಾರಾಷ್ಟ್ರದಲ್ಲಿ ದಿನೇ ದಿನೇ ನಿಯಂತ್ರಣ ಮೀರಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಮರಾವತಿಯಲ್ಲಿ ಸೋಮವಾರ (ಫೆ.22) ಸಂಜೆಯಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತಾಗಿ ಮಾಹಿತಿ ನೀಡಿರುವ ಸಚಿವೆ ಯಶೋಮತಿ ಠಾಕೂರ್, ಅಚಲ್ ನಗರವನ್ನು ಹೊರತುಪಡಿಸಿ ಇನ್ನುಳಿದ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಈ ಸಮಯದಲ್ಲಿ ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಉಡುಪಿ: ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ
ಇತ್ತೀಚೆಗೆ ಅಮರಾವತಿಯಲ್ಲಿ ವಾರಾಂತ್ಯದಲ್ಲಿ ಲಾಕ್ ಡೌನ್ ಅನ್ನು ಜಿಲ್ಲಾಡಳಿತ ಘೋಷಿಸಿದ್ದು, ಶನಿವಾರ ರಾತ್ರಿ 8 ಗಂಟೆಯಿಂದ ಆರಂಭಗೊಂಡು ಸೋಮವಾರ ಬೆಳಿಗ್ಗೆ 7 ಗಂಟೆಯ ವರೆಗೆ ಲಾಕ್ ಡೌನ್ ಜಾರಿಗೆ ತಂದಿತ್ತು. ಇದೀಗ ಕೋವಿಡ್ ಸೋಂಕಿನ ಹೆಚ್ಚಳದ ಹಿನ್ನೆಲೆಯಲ್ಲಿ ಈ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದು ವರದಿಯಾಗಿದೆ.
ಮಹಾರಾಷ್ಟ್ರದಲ್ಲಿ ಸತತವಾಗಿ ಎರಡನೇ ದಿನವೂ ಕೂಡಾ 6000 ಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ 20,93,913 ಕ್ಕೆ ಏರಿಕೆಯಾಗಿದೆ. ಇದರಲ್ಲಿ 48,439 ಜನರಲ್ಲಿ ಸೋಂಕು ಸಕ್ರಿಯವಾಗಿದ್ದು, 19,92, 530 ಜನರು ಗುಣಮುಖವಾಗಿದ್ದಾರೆ ಅಲ್ಲದೆ 51 ಸಾವಿರಕ್ಕೂ ಅಧಿಕ ಜನರು ಸೇಂಕಿನಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.