ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆ ಪ್ರಹಸನ ಮುಂದುವರಿದಿದ್ದು, 11 ಮಂದಿ ಶಾಸಕರು ರಾಜೀನಾಮೆ ಸಲ್ಲಿಸಿರುವುದಾಗಿ ಸ್ಪೀಕರ್ ರಮೇಶ್ ಕುಮಾರ್ ಶನಿವಾರ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಆದರೆ ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಎಚ್.ವಿಶ್ವನಾಥ್, ನಾವು ಒಟ್ಟು 13 ಮಂದಿ ರಾಜೀನಾಮೆ ಕೊಟ್ಟಿದ್ದೇವೆ. ಆನಂದ್ ಸಿಂಗ್ ಸೇರಿ 14 ಜನ ರಾಜೀನಾಮೆ ಕೊಟ್ಟಂತಾಗಿದೆ ಎಂದು ತಿಳಿಸಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಅತೃಪ್ತ ಶಾಸಕರು ಕಚೇರಿಗೆ ಬರುವ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲವಾಗಿತ್ತು. ಆದರೂ ಅವರ ರಾಜೀನಾಮೆ ಪತ್ರವನ್ನು ನಮ್ಮ ಕಾರ್ಯದರ್ಶಿ ಸ್ವೀಕರಿಸಿ, ಸ್ವೀಕೃತಿ ಪತ್ರ ನೀಡಿದ್ದಾರೆ.
ಭಾನುವಾರ ರಜೆ, ಸೋಮವಾರ ನನಗೆ ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾಗಿರುವುದರಿಂದ ಕಚೇರಿಗೆ ಬರಲ್ಲ. ಮಂಗಳವಾರ ಅಧಿಕಾರಿಗಳ ಜೊತೆ ಚರ್ಚಿಸಿ ರಾಜೀನಾಮೆ ಪತ್ರಗಳ ಪರಿಶೀಲನೆ ನಡೆಸಿ ಸಂವಿಧಾನಬದ್ಧವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.
11 ಮಂದಿ ಶಾಸಕರು ರಾಜೀನಾಮೆ:
ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹುಣಸೂರು ಶಾಸಕ ವಿಶ್ವನಾಥ, ಕೆಆರ್ ಪೇಟೆ ಶಾಸಕ ನಾರಾಯಣ ಗೌಡ, ಮಹಾಲಕ್ಷ್ಮಿಲೇಔಟ್ ಶಾಸಕ ಕೆ. ಗೋಪಾಲಯ್ಯ, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ, ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್, ಕೆಆರ್ ಪುರಂ ಶಾಸಕ ಬೈರತಿ ಬಸವರಾಜು, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಹಿರೇಕೆರೂರು ಶಾಸಕ ಬಿಸಿ ಪಾಟೀಲ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್.
ಈಗಾಗಲೇ ಕಾಂಗ್ರೆಸ್ ಪಕ್ಷದ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಒಟ್ಟು 12 ಮಂದಿ ಶಾಸಕರು ರಾಜೀನಾಮೆ ಕೊಟ್ಟಂತಾಗಿದೆ.
ಡಿಕೆಶಿ ಜೊತೆ ತೆರಳಿದ ರಾಮಲಿಂಗಾರೆಡ್ಡಿ, ಮುನಿರತ್ನ:
ಸ್ಪೀಕರ್ ಕಚೇರಿಯಲ್ಲಿದ್ದ ರಾಮಲಿಂಗಾ ರೆಡ್ಡಿ, ಬೈರತಿ ಬಸವರಾಜು, ಮುನಿರತ್ನ, ಎಸ್ ಟಿ ಸೋಮಶೇಖರ್ ಅವರನ್ನು ಡಿಕೆ ಶಿವಕುಮಾರ್ ತಮ್ಮ ನಿವಾಸಕ್ಕೆ ಕರೆ ತಂದು ಅತೃಪ್ತರ ಜೊತೆ ಮಾತುಕತೆ ನಡೆಸುತ್ತಿದ್ದಾರೆ.
ವಿದೇಶ ಪ್ರವಾಸ ಮೊಟಕುಗೊಳಿಸಿದ ದಿನೇಶ್ ಗುಂಡೂರಾವ್:
ಖಾಸಗಿ ಕಾರ್ಯ ನಿಮಿತ್ತ ವಿದೇಶಕ್ಕೆ ತೆರಳಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರವಾಸವನ್ನು ಮೊಟಕುಗೊಳಿಸಿ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡಾ ನ್ಯೂಜೆರ್ಸಿಯಿಂದ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದೀಗ ಅತೃಪ್ತ ಶಾಸಕರ ಮನವೊಲಿಕೆಗೆ ಡಿಕೆ ಶಿವಕುಮಾರ್ ಮುಂದಾಗಿದ್ದು, ಭಾನುವಾರ ಕುಮಾರಸ್ವಾಮಿ, ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ದಿನೇಶ್ ಗುಂಡೂರಾವ್ ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫೋಟೋ:ಫಕ್ರುದ್ದೀನ್