ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಬೃಹತ್ ಜಾಲವನ್ನು ಕಸ್ಟಮ್ಸ್ ಅಧಿಕಾರಿಗಳು ಬೇಧಿಸಿದ್ದಾರೆ. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣ(52 ಕೆ.ಜಿ) ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(33 ಕೆ.ಜಿ), ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(27 ಕೆ.ಜಿ) ಹಾಗೂ ಇತರೆ ವಿಮಾನ ನಿಲ್ದಾಣಗಳಲ್ಲಿ ಒಟ್ಟು 112 ಕೆ.ಜಿ. ಚಿನ್ನ ಜಪ್ತಿ ಮಾಡಲಾಗಿದೆ. ಸದ್ಯ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ವಿಮಾನ ನಿಲ್ದಾಣಗಳ ಸರಕು ಮತ್ತು ಸಾಗಣೆ ವಿಭಾಗದ ಮೂಲಕ ಅವ್ಯಹತವಾಗಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದಾಗ ಅಕ್ರಮ ಬಯಲಾಗಿದೆ. ಬೆಂಗಳೂರಿನ ವಿಮಾಣ ನಿಲ್ದಾಣಕ್ಕೆ ಸರಕು ಸಾಗಾಣೆ ವಿಭಾಗಕ್ಕೆ ವಿದೇಶ ದಿಂದ ಬಂದಿದ್ದ ಕೊರಿಯರ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ದಂಧೆಕೋರರ ಕೃತ್ಯ ಬೆಳಕಿಗೆ ಬಂದಿದ್ದು, ಸದ್ಯದ ಮಾಹಿತಿ ಪ್ರಕಾರ ದುಬೈನಿಂದ ಚಿನ್ನ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿಯಿದೆ ಎಂದು
ಮೂಲಗಳು ತಿಳಿಸಿವೆ.