ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಆರಂಭಿಸಲು ಸುಪ್ರೀಂ ಕೋರ್ಟ್ ಎಂಟು ವಾರಗಳ ಗಡುವು ನೀಡಿದ ಬೆನ್ನಲ್ಲೇ ಜಿ.ಪಂ., ತಾ.ಪಂ. ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ಹೈಕೋರ್ಟ್ 12 ವಾರಗಳ ಗಡುವು ವಿಧಿಸಿದೆ. ಈ ಗಡುವು ಮೀರಿ ಹೆಚ್ಚಿನ ಕಾಲಾವಕಾಶ ಕೇಳದಂತೆಯೂ ರಾಜ್ಯ ಸರಕಾರಕ್ಕೆ ತಾಕೀತು ಮಾಡಿದೆ.
ಮಂಗಳವಾರ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರಕಾರದ ಪರ ವಾದಿಸಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, “ಮೀಸಲಾತಿ ನಿಗದಿಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚಿಸಲಾಗಿದೆ’ ಎಂದರು. ಪ್ರತಿಕ್ರಿಯಿಸಿದ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ರಾಜ್ಯ ಸರಕಾರ ಮತ್ತೆ ಮತ್ತೆ ಹೆಚ್ಚಿನ ಸಮಯ ಕೇಳಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಮೂರು ತಿಂಗಳ ಗಡುವು ವಿಧಿಸಿ ವಿಚಾರಣೆ ಮುಂದೂಡಿತು.
“ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅದರಂತೆ ರಾಜ್ಯದಲ್ಲೂ ಜಿ.ಪಂ., ತಾ.ಪಂ.ಗಳಿಗೆ ಚುನಾವಣೆ ನಡೆಸಬೇಕಾಗಿದೆ. ಸುಪ್ರೀಂ ಕೋರ್ಟ್ ತೀರ್ಪಿನಿಂದ ತುರ್ತು ಸ್ಥಿತಿ ಎದುರಾಗಿದೆ ಎಂದು ಅಯೋಗವು ಕಳೆದ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ತಿಳಿಸಿತ್ತು.
ಕಳೆದ ವರ್ಷ ಎಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಅವಧಿ ಪೂರ್ಣಗೊಂಡ ರಾಜ್ಯದ ಜಿ.ಪಂ., ತಾ.ಪಂ.ಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಚುನಾವಣ ಆಯೋಗವು ಈ ಸಂಬಂಧ ಕ್ಷೇತ್ರ ಪುನರ್ ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು.
Related Articles
ಆಯೋಗದ ಅರ್ಜಿ
ಚುನಾವಣೆಗೆ ದಿನಾಂಕ ಘೋಷಣೆ ಮಾಡಬೇಕು ಎನ್ನುವ ಸಂದರ್ಭದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾ ವಣ ಆಯೋಗದಿಂದ ಹಿಂಪಡೆದಿದ್ದ ಸರಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದನ್ನು ಪ್ರಶ್ನಿಸಿ ಚುನಾವಣ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.