ಅಹಮದಾಬಾದ್: ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸೂರತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 125 ವರ್ಷ ಹಳೆಯ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಗುಜರಾತ್ ನಲ್ಲಿ ಹೊಸ ರಾಜಕೀಯ ಆರಂಭಿಸಿದೆ.
ಇದನ್ನೂ ಓದಿ:ಮೊಟೆರಾದ ಸರ್ದಾರ್ ಪಟೇಲ್ ಸ್ಟೇಡಿಯಂ ಇನ್ನು ನರೇಂದ್ರ ಮೋದಿ ಸ್ಟೇಡಿಯಂ
ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲಾ ಅಭ್ಯರ್ಥಿಗಳು ಪ್ರಾಮಾಣಿಕತೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ. ಈ ಮೂಲಕ ಗುಜರಾತ್ ಜನರ ಸೇವೆಯನ್ನು ಮಾಡುವುದಾಗಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಗುಜರಾತ್ ನ ಸ್ಥಳೀಯ ಸಂಸ್ಥೆಗೆ ಭಾನುವಾರ ಚುನಾವಣೆ ನಡೆದಿದ್ದು, ಸೂರತ್ ನಲ್ಲಿ ಆಮ್ ಆದ್ಮಿ ಪಕ್ಷ 27 ವಾರ್ಡ್ ಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದ್ದು, ಕಾಂಗ್ರೆಸ್, ಬಿಜೆಪಿ ಮುಖಭಂಗ ಅನುಭವಿಸಿದೆ.
ಸೂರತ್ ಜನರು 125 ವರ್ಷಗಳಷ್ಟು ಹಳೆಯ ಕಾಂಗ್ರೆಸ್ ಪಕ್ಷವನ್ನು ಪರಾಜಗೊಳಿಸಿ, ಪ್ರಮುಖ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಆಮ್ ಆದ್ಮಿ ಪಕ್ಷಕ್ಕೆ ಹೊಣೆಗಾರಿಕೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಪ್ರತಿಯೊಬ್ಬ ಅಭ್ಯರ್ಥಿಯೂ ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ ಎಂದು ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಭಾನುವಾರ 576 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಭಾರತೀಯ ಜನತಾ ಪಕ್ಷ 483 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ಕೇವಲ 55 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಆಮ್ ಆದ್ಮಿ ಪಕ್ಷ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಸೂರತ್ ನ ಎಲ್ಲಾ 27 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಈ ಬಾರಿ ಒಂದೇ ಒಂದು ಸ್ಥಾನದಲ್ಲಿ ಜಯ ಸಾಧಿಸಿಲ್ಲ ಎಂದು ವರದಿ ತಿಳಿಸಿದೆ.
2015ರಲ್ಲಿ ಬಿಜೆಪಿ 391 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ 174 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಈ ಬಾರಿ ಚುನಾವಣೆಯಲ್ಲಿ ಪಾತಿದಾರ್ ಅನಾಮತ್ ಆರಕ್ಷಣ್ ಸಮಿತಿ ಸೂರತ್ ನಲ್ಲಿ ಕಾಂಗ್ರೆಸ್ ಪಕ್ಷದ ಸ್ಪರ್ಧೆಯನ್ನು ಬಹಿಷ್ಕರಿಸಿತ್ತು. ಈ ಅವಕಾಶವನ್ನು ಆಪ್ ಬಳಸಿಕೊಂಡಿದ್ದು, ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು.