ಧಾರವಾಡ: ರಾಜ್ಯ ಸರಕಾರ ಮೇ 13ರಂದು 4 ವರ್ಷಗಳನ್ನು ಪೂರೈಸಿ 5ನೇ ವರ್ಷಕ್ಕೆ ಕಾಲಿಡುತ್ತಿದ್ದು, ಈ ಹಿನ್ನೆಲೆಯಲ್ಲಿ ಯೋಜನೆಗಳ ಫಲಾನುಭವಿಗಳ ಅನಿಸಿಕೆ ಆಲಿಸಲು ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಗುರುವಾರ ಸಂಜೆ ನಡೆದ ಜನಮನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಸರಕಾರದ ಜನಪರ ಯೋಜನೆಗಳಾದ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಪಶುಭಾಗ್ಯ, ವಸತಿ ಭಾಗ್ಯ, ರಾಜೀವ ಆರೋಗ್ಯ ಭಾಗ್ಯ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳ ಅನಿಸಿಕೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಆಲಿಸುವ ಜನಮನ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ 11:00ಗಂಟೆಗೆ ಡಾ| ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸರಕಾರದ ಯೋಜನೆಗಳ ಲಾಭ ಪಡೆದು ತಮ್ಮ ಬದುಕಿನಲ್ಲಿ ಗುಣಾತ್ಮಕ ಬದಲಾವಣೆ ಕಂಡುಕೊಂಡಿರುವ ಫಲಾನುಭವಿಗಳಿಂದ ನೈಜ ಅನಿಸಿಕೆಗಳನ್ನು ಆಲಿಸುವ ಕಾರ್ಯಕ್ರಮ ಇದಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತಿದೆ.
ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಯೋಜನೆಗಳ ಫಲಾನುಭವಿಗಳ ಪಟ್ಟಿ ಹಾಗೂ ಅನಿಸಿಕೆ ವ್ಯಕ್ತಪಡಿಸುವ ಆಯ್ದ ಫಲಾನುಭವಿಗಳನ್ನು ಗುರುತಿಸಿ ಕಾರ್ಯಕ್ರಮಕ್ಕೆ ಆಮಂತ್ರಿಸಬೇಕು ಎಂದರು. ಮುಖ್ಯಮಂತ್ರಿಗಳ ಹಾಗೂ ಜಿಲ್ಲಾ ಉಸ್ತವಾರಿ ಸಚಿವರ ಬಹುನಿರೀಕ್ಷೆಯ ಕಾರ್ಯಕ್ರಮ ಇದಾಗಿದೆ.
ಅಧಿಕಾರಿಗಳು ಆಸಕ್ತಿಯಿಂದ ತಮ್ಮ ಕಾರ್ಯ ನಿರ್ವಹಿಸಬೇಕು. ಯೋಜನೆಯ ಸಾಧಕ ಬಾಧಕಗಳ ಕುರಿತು ಫಲಾನುಭವಿಗಳು ಹೇಳುವ ಅಭಿಪ್ರಾಯಗಳನ್ನು ಆಲಿಸಿ ಅಗತ್ಯ ಕ್ರಮ ಜರುಗಿಸಬೇಕು. ಈ ಕುರಿತು ಮೇ 9ರಂದು ಬೆಳಿಗ್ಗೆ 11:00ಗಂಟೆಗೆ ಜಿಲ್ಲಾ ಉಸ್ತವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇನ್ನೊಂದು ಪೂರ್ವಭಾವಿ ಸಭೆ ನಡೆಯಲಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಜಿಪಂ ಉಪಕಾರ್ಯದರ್ಶಿ ವೈ.ಡಿ. ಕುನ್ನಿಭಾವಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕ ಸದಾಶಿವ ಮರ್ಜಿ, ಡಿಎಚ್‌ಒ ಡಾ| ಆರ್.ಎಂ.ದೊಡ್ಡಮನಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಗಿರಿಧರ ಕುಕನೂರ, ಕೆ.ಎಂ.ಎಫ್ ಅಧಿಕಾರಿ ಸಿದ್ಧರಾಜು,
ಡಿಡಿಪಿಐ ಎನ್.ಎಚ್. ನಾಗೂರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಶಾರದಾ ಕೋಲಕಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಮುನಿರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಆರ್.ಟಿ.ಪಡಗಣ್ಣವರ ಇದ್ದರು. ಮಂಜುನಾಥ ಡೊಳ್ಳಿನ ಸ್ವಾಗತಿಸಿ, ನಿರೂಪಿಸಿದರು.