Advertisement

150 ಕಿಮೀ ಗ್ರಾಮ ಸಡಕ್ ಅಭಿವೃದ್ಧಿ

11:56 AM Jan 07, 2020 | Suhan S |

ಧಾರವಾಡ: ಪ್ರಸಕ್ತ ವರ್ಷದಿಂದ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಜಿಲ್ಲೆಯಲ್ಲಿ 150 ಕಿಮೀ ರಸ್ತೆ ಅಭಿವೃದ್ಧಿ ಪಡಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

Advertisement

ಜಿಪಂ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕೈಗೊಂಡು ಅವರು ಮಾತನಾಡಿದರು. ಗ್ರಾಮ ಸಡಕ್‌ ಯೋಜನೆಯಡಿ ಪ್ರತಿ ತಾಲೂಕಿನ 30 ಕಿಮೀ ರಸ್ತೆ ಅಭಿವೃದ್ಧಿಗೆ ಅವಕಾಶವಿದೆ. ಈ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡಿದ್ದು, ಈ ಯೋಜನೆ ಅನುಷ್ಠಾನಕ್ಕೆ ತ್ವರಿತ ಕ್ರಮ ವಹಿಸಲಾಗುವುದು ಎಂದರು.

ನರೇಗಾ ಯೋಜನೆಯಡಿ ಲಭ್ಯವಿರುವ ಅನುದಾನವನ್ನು ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯೊಂದಿಗೆ ಸೇರಿಸಿ ಅಗತ್ಯವಿರುವೆಡೆ ಗ್ರಾಮೀಣ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದರು. ಎನ್‌ಆರ್‌ಎಲ್‌ಎಂ ಸಂಜೀವಿನಿ ಯೋಜನೆಯಡಿ ಗ್ರಾಮೀಣ ಕುಟುಂಬಗಳ ಜೀವನೋಪಾಯಕ್ಕಾಗಿ ರೂಪಿಸಿರುವ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗಬೇಕು. ಸ್ವಚ್ಛ ಭಾರತ ಮಿಷನ್‌ ಗ್ರಾಮೀಣ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 11 ಸಾವಿರ ವೈಯಕ್ತಿಕ ಶೌಚಾಲಯ ನಿರ್ಮಿಸಲಾಗಿದೆ.

ಉಳಿದ 9 ಸಾವಿರ ಶೌಚಾಲಯಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಶೌಚಾಲಯ ಕಟ್ಟಿಕೊಂಡವರಿಗೆ ಅದನ್ನು ಬಳಸಲು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಸಾಮೂಹಿಕ ಶೌಚಾಲಯಗಳ ನಿರ್ವಹಣೆಗೆ ಹಲವಾರು ಅಡೆತಡೆಗಳಿರುವುದರಿಂದ ಸಾಧ್ಯವಾದಷ್ಟು ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದರು.

ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಗ್ರಾಮೀಣ ನೈರ್ಮಲ್ಯ ಕಾರ್ಯ ಚುರುಕುಗೊಳಿಸಬೇಕು. ಸಾಮಾಜಿಕ ಭದ್ರತಾ ಯೋಜನೆಯಡಿ ಫಲಾನುಭವಿಗಳಿಗೆ ನೀಡುವ ಮಾಸಾಶನಗಳು ನೇರವಾಗಿ ಅವರ ಖಾತೆಗೆ ಜಮೆಯಾಗಬೇಕು. ಇಂದ್ರಧನುಷ ಸೇರಿದಂತೆ ವಿವಿಧ ಲಸಿಕೆಗಳ ಅಭಿಯಾನದಲ್ಲಿ ಜಿಲ್ಲೆಯು ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದೆ ಎಂದು ಹೇಳಿದರು.

Advertisement

ಜಿಲ್ಲೆಯ ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ ಜಿಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ದಾಸ್ತಾನು ಸಮರ್ಪಕ ಬಳಕೆಯಾಗದೇ ವ್ಯರ್ಥವಾಗುತ್ತಿರುವುದು ಗಮನಕ್ಕೆ ಬಂದಿದ್ದು, ಇದನ್ನು ತಡೆಯಬೇಕು ಎಂದರು.

ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಮಾತನಾಡಿ, ನರೇಗಾ ಯೋಜನೆಯಡಿ ಈ ಬಾರಿ 24,85,000 ಮಾನವ ದಿನಗಳ ಸೃಷ್ಟಿಗೆ ಗುರಿ ನಿಗದಿಪಡಿಸಲಾಗಿದೆ. ಕಾಮಗಾರಿಗಳು ಪ್ರಗತಿಯಲ್ಲಿದ್ದು, ಶೇಕಡಾ ನೂರರಷ್ಟು ಗುರಿ ಸಾಧಿಸಲಾಗುವುದು ಎಂದರು. ಶಾಸಕರಾದ ಸಿ.ಎಂ. ನಿಂಬಣ್ಣವರ, ಶಂಕರ ಪಾಟೀಲ ಮುನೇನಕೊಪ್ಪ, ಡಿಸಿ ದೀಪಾ ಚೋಳನ್‌, ಜಿಪಂ ಉಪಕಾರ್ಯದರ್ಶಿ ಎಸ್‌.ಜಿ. ಕೊರವರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next