ಉನ್ನಾವ್: ಉತ್ತರ ಪ್ರದೇಶದ ಉನ್ನಾವ್ ನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಬಲ್ ಡೆಕ್ಕರ್ ಬಸ್ ಹಾಲಿನ ಟ್ಯಾಂಕರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, 19 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಸ್ ಬಿಹಾರದ ಮೋತಿಹಾರಿಯಿಂದ ದೆಹಲಿಗೆ ತೆರಳುತ್ತಿದ್ದ ಗರ್ಹಾ ಗ್ರಾಮದ ಬಳಿ ಹಾಲಿನ ಟ್ಯಾಂಕರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ನಜ್ಜುಗುಜ್ಜಾಗಿದ್ದು, ಜನರು ಬಸ್ ನಿಂದ ಎಸೆಯಲ್ ಪಟ್ಟಿದ್ದಾರೆ ಎಂದು ಎಂದು ಎಂದು ಉನ್ನಾವಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ತಿಳಿಸಿದ್ದಾರೆ.
ಪೊಲೀಸರು ಮತ್ತು ಇತರ ತುರ್ತು ಸಿಬಂದಿ ಸಂತ್ರಸ್ತರನ್ನು ಹೊರತೆಗೆಯಲು ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸ್ಥಳಕ್ಕೆ ಧಾವಿಸಿದ್ದು, ಭೀಕರ ದೃಶ್ಯಗಳಿಗೆ ಸಾಕ್ಷಿಯಾಗಿತ್ತು. ನೆಲದ ಮೇಲೆ ಬಿದ್ದಿದ್ದ ದೇಹಗಳು ಛಿದ್ರವಾಗಿದ್ದ ಬಸ್ ನ ಅವಶೇಷಗಳು ಕಂಡು ಬಂದವು.
ಗಾಯಾಳುಗಳನ್ನು ಉನ್ನತ ಮಟ್ಟದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಉನ್ನಾವ್‌ಗೆ ಸಮೀಪವಿರುವ ಎಲ್ಲಾ ಆಸ್ಪತ್ರೆಗಳನ್ನು ಅಲರ್ಟ್‌ನಲ್ಲಿ ಇರಿಸಲಾಗಿದೆ. ಕೆಜಿಎಂಯು ಲಕ್ನೋ ಟ್ರಾಮಾ ಸೆಂಟರ್ ಅಲರ್ಟ್ ಆಗಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತಕ್ಕೆ ಕಾರಣವೇನು ಎಂಬ ತನಿಖೆ ನಡೆಯುತ್ತಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಬಸ್ ಅತಿವೇಗದಿಂದ ಚಲಿಸುತ್ತಿತ್ತು ಎಂದು ಹೇಳಲಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಕ್ಸ್ ಪೋಸ್ಟ್ ನಲ್ಲಿ ದುರಂತಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. “ಮಡಿದವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವಿದೆ. ಸ್ಥಳದಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಬರೆದಿದ್ದಾರೆ.
ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ. ಗಾಯಗೊಂಡವರಲ್ಲಿ ಹೆಚ್ಚಿನವರು ಬಿಹಾರದವರು, ಮತ್ತು ರಾಜ್ಯವು ಬಿಹಾರ ಸರ್ಕಾರದೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಹೇಳಿದ್ದಾರೆ.