ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಪಕ್ಕದಲ್ಲಿರುವ ಉತ್ತರ ಪ್ರದೇಶದ ಗೌತಮ್ ಬುದ್ದ ನಗರ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಧ್ಯಪ್ರದೇಶದ ಶಿವಪುರಿಯಿಂದ ದೆಹಲಿಗೆ ತೆರಳುತ್ತಿದ್ದ ಬಸ್ ಹಾಗೂ ಪ್ರತಾಪ್‌ಗಢದಿಂದ ಉತ್ತರ ಪ್ರದೇಶದ ಆನಂದ್ ವಿಹಾರ್‌ಗೆ ತೆರಳುತ್ತಿದ್ದ ಬಸ್ ಪರಸ್ಪರ ಢಿಕ್ಕಿ ಹೊಡೆದಿದ್ದು ಮೂವರು ಸಾವನ್ನಪ್ಪಿದ್ದಾರೆ.
ಮಾಹಿತಿಯ ಪ್ರಕಾರ, ಪಾರಿ ಚೌಕ್‌ನಿಂದ ನೋಯ್ಡಾವನ್ನು ಸಂಪರ್ಕಿಸುವ ನೋಯ್ಡಾ-ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಸಂಭವಿಸಿದ್ದು, ವಾಹನ ಸ್ಫೋಟಗೊಂಡಿದೆ ಎಂದು ವರದಿಗಳು ತಿಳಿಸಿವೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಮಾಹಿತಿ ಪಡೆದ ಗ್ರೇಟರ್ ನೋಯ್ಡಾ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸ್ ತಂಡ ಎರಡೂ ಬಸ್‌ಗಳಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬಸ್ ಅಪಘಾತದಲ್ಲಿ ಗಾಯಗೊಂಡ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇತರ ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ.
20 ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಗ್ರೇಟರ್ ನೋಯ್ಡಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಗ್ರೇಟರ್ ನೋಯ್ಡಾದ ಯಥಾರ್ಥ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇನ್ನು 10 ಮಂದಿ ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗ್ರೇಟರ್ ನೋಯ್ಡಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ಕಾರಣದ ಏನೆಂಬುದರ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.