Advertisement

ನೇಕಾರರಿಗೆ ಬಂಪರ್‌; ಶೂನ್ಯ ಬಡ್ಡಿ ದರದಲ್ಲಿ 2 ಲಕ್ಷ ರೂ. ಸಾಲ

08:00 PM Dec 17, 2022 | Team Udayavani |

ಬೆಂಗಳೂರು: ಕೃಷಿಕರ ಮಾದರಿಯಲ್ಲಿ ನೇಕಾರರಿಗೂ 2 ಲಕ್ಷ ರೂ. ಶೂನ್ಯ ಬಡ್ಡಿದರದ ಸಾಲ ಒದಗಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ.

Advertisement

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ನೇಕಾರರ ಸಮಸ್ಯೆಗಳಿಗೆ ಪರಿಹಾರ ರೂಪಿಸುವ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪವರ್‌ ಲೂಮ್‌ನಲ್ಲಿ ಕಾರ್ಯನಿರ್ವಹಿಸುವ ಕೂಲಿಕಾರರಿಗೆ ನೇಕಾರ ಸಮ್ಮಾನ್‌ ಯೋಜನೆಯನ್ನು ವಿಸ್ತರಿಸಲೂ ನಿರ್ಧರಿಸಲಾಗಿದೆ.

ವೃತ್ತಿಪರ ನೇಕಾರ ಸಮುದಾಯಗಳಿಗೆ ಶೇ.50ರಷ್ಟು ಸಹಾಯಧನ, ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ ವಾಸ್ತವ್ಯ ಪ್ರಮಾಣಪತ್ರ(ಆಕ್ಯುಪೆನ್ಸಿ ಸರ್ಟಿಫಿಕೇಟ್‌) ನೀಡುವುದು, ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ ಗುಡಿ ಕೈಗಾರಿಕೆ ಎಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡುವ ಆದೇಶ ಹೊರಡಿಸಲು ತೀರ್ಮಾನಿಸಲಾಯಿತು.

ಕೈಮಗ್ಗ ಮತ್ತು ವಿದ್ಯುತ್‌ ಚಾಲಿತ ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ವಿದ್ಯಾವಿಕಾಸ ಯೋಜನೆಯಡಿ ಸಮವಸ್ತ್ರ ಪೂರೈಕೆ ಪ್ರಮಾಣ ನಿಗದಿಪಡಿಸಿ, ಉಳಿದ ಪ್ರಮಾಣಕ್ಕೆ ಟೆಂಡರ್‌ ಕರೆಯಲು ತೀರ್ಮಾನಿಸಿ, ಈ ತಿಂಗಳೇ ಕಾರ್ಯಾದೇಶ ನೀಡಿ, ಸಕಾಲದಲ್ಲಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಬೊಮ್ಮಾಯಿ ಸೂಚಿಸಿದರು.

ತ.ನಾಡು ಮಾದರಿ ಉಚಿತ ವಿದ್ಯುತ್‌:
ವಿವಿಧ ಇಲಾಖೆಗಳ ಸಮವಸ್ತ್ರದ ಅಗತ್ಯತೆಯ ಶೇ.25ರಷ್ಟನ್ನು ಕೈಮಗ್ಗ ನಿಗಮದ ಮೂಲಕ ಖರೀದಿಸುವುದು. 5 ಎಚ್‌.ಪಿ.ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ವಿದ್ಯುತ್‌ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ ತಮಿಳುನಾಡು ಮಾದರಿಯಲ್ಲಿ ಉಚಿತ ವಿದ್ಯುತ್‌ ಒದಗಿಸುವುದು, ನಿಗದಿತ ಶುಲ್ಕದಲ್ಲಿ ಶೇ.50 ರಿಯಾಯಿತಿ ನೀಡಲು ನಿರ್ಧರಿಸಲಾಯಿತು.

Advertisement

ನೇಕಾರರನ್ನು ಅಸಂಘಟಿತ ವಲಯದಲ್ಲಿ ಸೇರಿಸಿ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ವೃತ್ತಿಪರ ಕೂಲಿ ನೇಕಾರರಿಗೂ ವಿಸ್ತರಿಸುವ ಬಗ್ಗೆ ಪರಿಶೀಲಿಸಿ, ಬಜೆಟ್‌ ಮಂಡನೆ ಸಂದರ್ಭದಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿಯವರು ಭರವಸೆ ನೀಡಿದರು.

ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕೆಎಚ್‌ಡಿಸಿ ಅಧ್ಯಕ್ಷ ಸಿದ್ದು ಸವದಿ, ಶಾಸಕರಾದ ಅಭಯ್‌ ಪಾಟೀಲ್‌, ಮಹದೇವಪ್ಪ ಯಾದವಾಡ, ಮಾಜಿ ಶಾಸಕ ಎಂ.ಡಿ.ಲಕ್ಷ್ಮಿ ನಾರಾಯಣ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next