ಚೆನ್ನೈ: ಫೆಂಗಲ್ ಚಂಡಮಾರುತ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಪ್ರದೇಶದಲ್ಲಿ ಶನಿವಾರ (ನ.30) ರಾತ್ರಿ ಅಪ್ಪಳಿಸಿದ್ದು, ಭಾರೀ ಮಳೆಯಿಂದಾಗಿ ಚೆನ್ನೈನ ಹಲವು ಪ್ರದೇಶ ಜಲಾವೃತಗೊಂಡಿದೆ. ಅಲ್ಲದೇ ಚೆನ್ನೈ ವಿಮಾನ ನಿಲ್ದಾಣ ಬಂದ್ ಮಾಡಿರುವುದಾಗಿ ವರದಿ ತಿಳಿಸಿದೆ.
ಫೆಂಗಲ್ ಚಂಡಮಾರುತದ ಅಬ್ಬರದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಂಡಮಾರುತದ ಪರಿಣಾಮ ಭಾರೀ ಮಳೆಯಾಗಿದ್ದು, ಚೆನ್ನೈ ನಗರದ ಹಲವಾರು ಆಸ್ಪತ್ರೆಗಳು ಹಾಗೂ ಮನೆಗಳು ಜಲಾವೃತಗೊಂಡಿದೆ.
ಚಂಡಮಾರುತದಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ನೂರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುದುಚೇರಿಯಲ್ಲೂ ತಗ್ಗುಪ್ರದೇಶದಲ್ಲಿ ವಾಸವಾಗಿದ್ದ ಜನರನ್ು ಜಿಲ್ಲಾಡಳಿತ ಸ್ಥಳಾಂತರಿಸಿದ್ದು, ಜನರಿಗೆ ಎಸ್ ಎಂಎಸ್ ಮೂಲಕ ಸೂಚನೆ ನೀಡಲಾಗಿತ್ತು ಎಂದು ವರದಿ ವಿವರಿಸಿದೆ.
ಹವಾಮಾನ ವೈಪರೀತ್ಯದಿಂದಾಗಿ ಹಲವು ವಿಮಾನ ಸಂಚಾರ ರದ್ದುಗೊಂಡಿದ್ದು, ಭಾನುವಾರ 4ಗಂಟೆವರೆಗೆ ವಿಮಾನ ನಿಲ್ದಾಣ ಬಂದ್ ಆಗಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚೆನ್ನೈನ ಪ್ರಸಿದ್ಧ ಮರೀನಾ ಬೀಚ್ ಹಾಗೂ ಮಹಾಬಲಿಪುರಂ ಬೀಚ್ ನಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ಜನರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ. ಚೆನ್ನೈಯಿಂದ ತಿರುಪತಿಗೆ ತೆರಳಬೇಕಿದ್ದ 20 ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿದೆ.