ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಮಾ.4 ರಿಂದ 23 ರವರೆಗೆ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲೆಯ 22 ಪರೀಕ್ಷಾ ಕೇಂದ್ರಗಳ 100 ಮೀಟರ್‌ವರೆಗೆ ಯಾವುದೇ ಅಹಿತಕರ ಘಟನೆ ನಡೆಯದಂತೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್ ಗಳ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕ ಅಧಿಕಾರಿಗಳೊಂದಿಗೆ ದ್ವಿತೀಯ ಪರೀಕ್ಷಾ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಡಿಬಿಡಿಯಲ್ಲಿ ಪರೀಕ್ಷೆ ನಡೆಸಬೇಡಿ: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಸಂಬಂಧಿತ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಳ್ಳಬೇಕು. ಮುಖ್ಯ ಅಧೀಕ್ಷಕರ ಪರೀಕ್ಷೆ ವೇಳೆ ಮೊಬೈಲ್ ನಿಷೇಧಿಸಲಾಗುತ್ತದೆ. ಅಲ್ಲದೆ, ಮೊಬೈಲ್, ಪೇಜರ್ ಮತ್ತು ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತರದಂತೆ ಕ್ರಮ ವಹಿಸಬೇಕು. ಅಧಿಕಾರಿಗಳು ಯಾವುದೇ ಗಡಿಬಿಡಿ ಮಾಡಿಕೊಳ್ಳದೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದರು. ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಎಚ್ಚರದಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷೆ ಸುಸೂತ್ರವಾಗಿ ಹಾಗೂ ಯಶಸ್ವಿಯಾಗಿ ನಡೆಸಬೇಕು ಎಂದು ತಿಳಿಸಿದರು.
ಸಿಸಿ ಕ್ಯಾಮರಾ ಅಳವಡಿಕೆ: ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ, ಸಿಸಿಟಿವಿ ಹಾಗೂ ಕೇಂದ್ರಗಳಿಗೆ ಭದ್ರತೆ ಕಲ್ಪಿಸಿಕೊಡಲು ಪೊಲೀಸ್ ಕಣ್ಗಾವಲು ವ್ಯವಸ್ಥೆ ನೀಡಬೇಕಾಗುತ್ತದೆ. ಪ್ರತಿ ತಾಲೂಕಿಗೆ ಒಬ್ಬರಂತೆ ಸಂಚಾರಿ ಜಾಗೃತಿ ದಳ ಹಾಗೂ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಇಬ್ಬರಂತೆ ವಿಶೇಷ ಜಾಗೃತಿ ದಳದ ಸದಸ್ಯರನ್ನು ನೇಮಿಸಬೇಕು. ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ನೀಡಲು ವೈದ್ಯಕೀಯ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಎಂ.ಸೀತಾರಾಮರೆಡ್ಡಿ ಪರೀಕ್ಷಾ ಸಿದ್ಧತೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಉಪವಿಭಾಗಾಧಿಕಾರಿ ಎ.ಎನ್. ರಘುನಂದನ್, ಜಿಲ್ಲಾ ಖಜಾನೆ ಉಪನಿರ್ದೇಶಕ ಮುನಿರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್ .ಜಿ.ನಾಗೇಶ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.