Advertisement

22 ಸಾವಿರ ಕೋಟಿ ರೂ. ಹೂಡಿಕೆಗೆ ಒಡಂಬಡಿಕೆ: ಎಂ.ಬಿ. ಪಾಟೀಲ್‌

12:28 AM Jan 18, 2024 | Team Udayavani |

ಬೆಂಗಳೂರು: ಸ್ವಿಟ್ಜರ್‌ಲ್ಯಾಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್‌ ನೇತೃತ್ವದ ನಿಯೋಗವು ಎರಡನೆಯ ದಿನವಾದ ಮಂಗಳವಾರ ವಿವಿಧ ಕಂಪೆನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ.

Advertisement

ಈ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿರುವ ಸಚಿವರು, “ಈ ಯೋಜನೆಗಳಲ್ಲಿ ವೆಬ್‌ ವರ್ಕ್ ಕಂಪನಿಯು ಬೆಂಗಳೂರಿನಲ್ಲಿ ಸ್ಥಾಪಿಸಲಿರುವ 100 ಮೆಗಾವ್ಯಾಟ್‌ ಸಾಮರ್ಥ್ಯದ 20 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಡೇಟಾ ಸೆಂಟರ್‌ ಪಾರ್ಕ್‌ ಯೋಜನೆ ಕೂಡ ಸೇರಿದೆ. ಇದಲ್ಲದೆ ಮೈಕ್ರೋಸಾಫ್ಟ್ ಹಿಟಾಚಿ, ಲುಲು ಗ್ರೂಪ್‌, ಹ್ಯೂಲೆಟ್‌ ಪೆಕಾರ್ಡ್‌ (ಎಚ್‌ಪಿ), ಹನಿವೆಲ್‌, ಐನಾಕ್ಸ್ ವೋಲ್ವೋ, ನೆಸ್ಲೆ, ಕಾಯಿನ್‌ ಬೇಸ್‌, ಟಕೇಡಾ ಫಾರ್ಮಾ, ಬಿಎಲ್‌ ಆಗ್ರೋ ಇತ್ಯಾದಿ ಕಂಪನಿಗಳೊಂದಿಗೆ 2,000 ಕೋಟಿ ರೂ. ಮೌಲ್ಯದ ಹೂಡಿಕೆಗಳಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವ ಮೈಕ್ರೋಸಾಫ್ಟ್ ಕಂಪೆನಿಯು ಕೌಶಲಾಭಿವೃದ್ಧಿ ಮತ್ತು ಸುಗಮ ಆಡಳಿತ ಉಪಕ್ರಮಗಳ ತರಬೇತಿ ಕೊಡಲಿದೆ. ಹಿಟಾಚಿ ಕಂಪೆನಿಯು ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತುಇ- ಗವರ್ನೆನ್ಸ್ ಕ್ಷೇತ್ರಗಳಲ್ಲಿ ಬಂಡವಾಳ ತೊಡಗಿಸಲಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಲುಲು ಸಮೂಹವು ಹಣ್ಣು ಮತ್ತು ತರಕಾರಿ ಸಂಸ್ಕರಣೆ ಕ್ಷೇತ್ರದಲ್ಲಿ ಹೆಜ್ಜೆ ಗುರುತು ಮೂಡಿಸಲು ಉತ್ಸುಕವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಶೃಂಗಸಭೆಯಲ್ಲಿ ತಾವು ,ನಿಖೀಲ್‌ ರತಿ, ಐನಾಕ್ಸ್ ಕಂಪೆನಿಯ ಸಿದ್ಧಾರ್ಥ ಜೈನ್‌, ಹನಿವೆಲ್‌ ಕಂಪೆನಿ ಮುಖ್ಯಸ್ಥ ಅನಂತ್‌ ಮಹೇಶ್ವರಿ, ಲುಲು ಗ್ರೂಪ್‌ ವ್ಯವಸ್ಥಾಪಕ ನಿರ್ದೇಶಕ ಯೂಸುಫ್ ಅಲಿ ಮುಂತಾದವರೊಂದಿಗೆ ವಿಸ್ತೃತ ಮಾತುಕತೆ ನಡೆಸಲಾಗಿದೆ. ದಾವೋಸ್‌ಗೆ ತೆರಳಿರುವ ನಿಯೋಗದಲ್ಲಿ ಹಣ ಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ .ಕೆ. ಅತೀಕ್‌, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಐಟಿಬಿಟಿ ಕಾರ್ಯದರ್ಶಿ ಏಕ್‌ ರೂಪ್‌ ಕೌರ್‌, ಆಯುಕ್ತೆ ಗುಂಜನ್‌ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್‌ ಇದ್ದರು.

ಆರ್ಥಿಕ ಅಭಿವೃದ್ಧಿಯ ಹೊಸ ಯುಗ
ಈ ಒಡಂಬಡಿಕೆಗಳು ಕಾರ್ಯರೂಪಕ್ಕೆ ಬರುವ ಮೂಲಕ ರಾಜ್ಯವು ತಂತ್ರಜ್ಞಾನ ಮತ್ತು ಆರ್ಥಿಕ ಅಭಿವೃದ್ಧಿಯ ಹೊಸ ಯುಗವನ್ನು ಕಾಣಲಿದೆ. ಈ ಹೂಡಿಕೆಗಳಿಂದ ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ ಸಹಿತ ಹಲವು ಭಾಗಗಳು ಮುಂಚೂಣಿಗೆ ಬರಲಿದ್ದು, ಈ ಯೋಜನೆಗಳಿಗೆ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ.
-ಎಂ.ಬಿ. ಪಾಟೀಲ್‌, ಕೈಗಾರಿಕಾ ಸಚಿವ

Advertisement
Advertisement

Udayavani is now on Telegram. Click here to join our channel and stay updated with the latest news.

Next