Advertisement

224 ಕೆಜೆಪಿ ಅಭ್ಯರ್ಥಿಗಳು ಕಣಕ್ಕೆ

12:53 PM Dec 12, 2017 | Team Udayavani |

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು ಕೆಜೆಪಿ ನಿರ್ಣಾಯಕ ಪಾತ್ರವಹಿಸಲಿದೆ ಎಂದು ಕರ್ನಾಟಕ ಜನತಾ ಪಕ್ಷ(ಕೆಜೆಪಿ) ಸಂಸ್ಥಾಪಕ ಅಧ್ಯಕ್ಷ ಪ್ರದ್ಮನಾಭ ಪ್ರಸನ್ನಕುಮಾರ್‌ ತಿಳಿಸಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪುನರ್‌ ಸಂಘಟನಾ ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಮಹಿಳೆಯರು, ಯುವಕರು ಹಾಗೂ ರೈತರಿಗೆ ಹೆಚ್ಚಿನ ಆದ್ಯತೆ ನೀಡಲು ರಾಜ್ಯ ಪ್ರವಾಸ ಮಾಡುವುದಾಗಿ ಹೇಳಿದರು.

ಕಳೆದ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕದಲ್ಲಿ ಕೆಲವೇ ಮತಗಳ ಅಂತರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸೋತಿದ್ದರು. ಹೀಗಾಗಿ ಪಕ್ಷ ಈ ಹಿಂದೆ ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಚುನಾವಣೆಯಲ್ಲಿ ಮುನ್ನಡೆಯಲಿದೆ.

ಈ ಬಾರಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಕೆಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. ಅದರಂತೆ ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌ ಕರ್ನಾಟಕದ 125 ಕ್ಷೇತ್ರಗಳಲ್ಲಿ 75 ಅಭ್ಯರ್ಥಿಗಳ ಆಯ್ಕೆ ಪೂರ್ಣಗೊಂಡಿದೆ ಎಂದರು.

ಅಭ್ಯರ್ಥಿ ಆಯ್ಕೆ ಗೊಂದಲ: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲ ಉಂಟಾಗಿದೆ. ಎರಡೂ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲಲು ವಾಮಮಾರ್ಗ ಅನುಸರಿಸುವ ಚಿಂತನೆಯಲ್ಲಿವೆ. ಆದರೆ, ನಾಡು-ನುಡಿಗಾಗಿ ಹೋರಾಡಲು ಕೆಜೆಪಿ ಬದ್ಧವಾಗಿದೆ ಎಂದರು.

Advertisement

ಅಲ್ಲದೆ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳ ಪ್ರಮುಖ ನಾಯಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದು, ಇವರಿಗೆ ಟಿಕೆಟ್‌ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು, ಮೈಸೂರು ಜಿಲ್ಲೆಯ ಚುನಾವಣಾ ಉಸ್ತುವಾರಿಯನ್ನು ನಾಗೇಂದ್ರ ಎಂಬುವರಿಗೆ ನೀಡಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ನವೀನ್‌ ಪಂಡಿತ್‌, ಮೈಸೂರು ಉಸ್ತುವಾರಿ ನಾಗೇಂದ್ರ, ರಾಜ್ಯ ಉಪಾಧ್ಯಕ್ಷ ಸಂತೋಷ್‌ ಇದ್ದರು.

ಕೆಜೆಪಿ-ಬಿಜೆಪಿ ನಡುವೆ ಮತ ಹಂಚಿಕೆ ಸಾಧ್ಯತೆ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮದುವೆ ಸೀಡಿ ಕುರಿತು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಹೀಗಾಗಿ ಸೀಡಿ ವಿಚಾರವಾಗಿ ಪ್ರಸ್ತಾಪಿಸುವುದಿಲ್ಲ.

ಕಳೆದ ಚುನಾವಣೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರು ಕೆಜೆಪಿಯಿಂದ ಸ್ಪರ್ಧಿಸಿದ್ದರು. ಆದರೆ ಈಗ ಬಿಜೆಪಿ ಅಧ್ಯಕ್ಷರಾಗಿರುವ ಅವರು ಕಮಲದ ಚಿಹ್ನೆಯಿಂದ ಸ್ಪರ್ಧಿಸಲಿದ್ದಾರೆ. ಇದು ಮತದಾರರಿಗೆ ಗೊಂದಲ ಉಂಟಾಗಿ ಬಿಜೆಪಿ ಮತಗಳು ಹಂಚಿಕೆಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಪ್ರದ್ಮನಾಭ ಪ್ರಸನ್ನಕುಮಾರ್‌ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next