Advertisement
ರಾಜ್ಯದ 22 ಜಿಲ್ಲೆ ಹಾಗೂ 103 ತಾಲೂಕುಗಳಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಉಂಟಾಗಿದೆ. ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆಯಾಗಿದೆ. ಪರಿಹಾರ ಕಾರ್ಯ ಎಲ್ಲಿಯೂ ಸಮರ್ಪಕವಾಗಿ ಆಗಿಲ್ಲ ಎಂದು ಸಭೆಯಲ್ಲಿ ಶಾಸಕರು ತಿಳಿಸಿದ್ದಾರೆ. ನೀರು ನುಗ್ಗಿರುವ ಮನೆಗಳ ಮಾಲೀಕರಿಗೆ ತಲಾ ಹತ್ತು ಸಾವಿರ ರೂ.ಪರಿಹಾರ ಕೊಟ್ಟಿರುವುದನ್ನು ಬಿಟ್ಟರೆ ಪ್ರವಾಹಪೀಡಿತ ಪ್ರದೇಶಗಳಲ್ಲಿ ಯಾವುದೇ ಕೆಲಸವಾಗಿಲ್ಲ. ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಿಲ್ಲ. ಪ್ರವಾಹದಿಂದ ಶಾಲೆಗಳು ಕುಸಿದಿದ್ದು, ಅಂತಹ ಕಡೆ ಶಾಲೆಗಳು ಪುನಾರಂಭವಾಗಿಲ್ಲ. ಜನರಿಗೆ ಕುಡಿಯುವ ನೀರಿಲ್ಲ. ದನ, ಕರುಗಳಿಗೆ ಮೇವು ಒದಗಿಸಿಲ್ಲ ಎಂದು ಆರೋಪಿಸಿದರು.
ಬೆಂಗಳೂರು: ರಾಜ್ಯದಲ್ಲಿ ಎಂದೂ ಕಾಣದಂತಹ ಪ್ರವಾಹ ಹಾಗೂ ಬರಗಾಲ ಬಂದಿರುವುದರಿಂದ ಪ್ರವಾಹ ಪೀಡಿತ ಜಿಲ್ಲೆಗಳ ರೈತರ ಸಹಕಾರ ಬ್ಯಾಂಕ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಕಾಂಗ್ರೆಸ್, ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಬುಧವಾರ ನಡೆದ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ಬಳಿಕ, ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಸಾಂಕೇತಿಕವಾಗಿ ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
Related Articles
Advertisement
ಸರ್ವ ಪಕ್ಷದ ಸಭೆ ಕರೆಯಲಿ: ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರವಾಹಕ್ಕೆ ಸಂಬಂಧಿಸಿದಂತೆ ಇಂದಿನವರೆಗೂ ಚರ್ಚಿಸಲು ಸರ್ವ ಪಕ್ಷದ ಸಭೆ ಕರೆದಿಲ್ಲ. ಕೇವಲ ಬಿಜೆಪಿ ಶಾಸಕರನ್ನು ಕರೆದು ಸಭೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ಪ್ರವಾಹ ಬಂದಿಲ್ವಾ? ಬಿಜೆಪಿ ಶಾಸಕರ ಕ್ಷೇತ್ರಗಳಿಗೆ 25 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ.
ಅನರ್ಹ ಶಾಸಕರ ಕ್ಷೇತ್ರಗಳಿಗೂ ಹಣ ಬಿಡುಗಡೆ ಮಾಡಿದ್ದಾರೆ. ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಮಾತ್ರ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿಯೇ ಹೆಚ್ಚು ಪ್ರವಾಹ ಬಂದಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ಕೇಳಿದರೆ, ಅಲ್ಲಿ ಅಧಿವೇಶನ ನಡೆಸಲು ಇವರಿಗೆ ಧೈರ್ಯವಿಲ್ಲ. ಹಾಗಿದ್ದರೆ ಬೆಳಗಾವಿಯಲ್ಲಿ ಸುವರ್ಣ ಸೌಧ ಕಟ್ಟಿ ಪ್ರಯೋಜನವೇನು ಎಂದು ಪ್ರಶ್ನಿಸಿದರು.
ಕೈ ಶಾಸಕಾಂಗ ಪಕ್ಷದ ನಿರ್ಣಯಗಳು-ಪ್ರವಾಹ ಪೀಡಿತ ಸಂತ್ರಸ್ತರಿಗೆ ತಕ್ಷಣ ಪರಿಹಾರ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದು. -ರಾಜ್ಯ ಸರ್ಕಾರ ತಕ್ಷಣ ಪರಿಹಾರ ಬಿಡುಗಡೆ ಮಾಡುವಂತೆ ಪ್ರದೇಶವಾರು ಆಂದೋಲನ ನಡೆಸುವುದು. -ಪ್ರವಾಹ ಹಾಗೂ ಬರ ಪರಿಸ್ಥಿತಿ ಇರುವುದರಿಂದ ರಾಜ್ಯದ ಎಲ್ಲ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಒತ್ತಾಯಿಸುವುದು. -ಕೂಡಲೇ ಬೆಳಗಾವಿಯಲ್ಲಿ ಪ್ರವಾಹ ಹಾಗೂ ಬರ ಕುರಿತು ಚರ್ಚಿಸಲು ಅಧಿವೇಶನ ಕರೆಯುವುದು. -ಬರ ಪೀಡಿತ ತಾಲೂಕುಗಳ ಘೋಷಣೆ ಮಾಡಲು ಒತ್ತಾಯಿಸುವುದು. -ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದ್ದು, ಪಕ್ಷ ಅವರ ಬೆನ್ನಿಗೆ ನಿಲ್ಲುವುದು. ಯಡಿಯೂರಪ್ಪ ಅವರು ಕಾಂಗ್ರೆಸ್‌ನವರಿಗೆ ಮಾಡಲು ಕೆಲಸ ಇಲ್ಲ ಎಂದು ಹೇಳಿದ್ದಾರೆ. ಪ್ರತಿಪಕ್ಷವಾಗಿ ಸರ್ಕಾರ ಕೆಲಸ ಮಾಡದಿದ್ದರೆ ಅವರ ವಿರುದ್ದ ಹೋರಾಟ ಮಾಡುವುದೇ ನಮ್ಮ ಕೆಲಸ. ಯಡಿಯೂರಪ್ಪ ಹೇಳಿದ ಹಾಗೆ ಕೇಳಲು ನಾವಿಲ್ಲ. ರೈತರು, ಬಡವರ ಬಗ್ಗೆ ಅವರಿಗೆ ಅಷ್ಟೊಂದು ಕಾಳಜಿ ಇದ್ದರೆ, ಪ್ರವಾಹ ಪರಿಹಾರ ನೀಡಲಿ.
-ಸಿದ್ದರಾಮಯ್ಯ, ಮಾಜಿ ಸಿಎಂ ರಾಜ್ಯದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಅನಾಹುತವಾಗಿದೆ. ಆದರೆ, ಕೇಂದ್ರ ಸರ್ಕಾರ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಇಷ್ಟೊಂದು ಕೆಟ್ಟ ಸರ್ಕಾರವನ್ನು ನಾವು ಯಾವತ್ತೂ ನೋಡಿಲ್ಲ. ಹೀಗಾಗಿಯೇ, ಬೀದಿಗಿಳಿದು ಹೋರಾಟ ಮಾಡಲು ತೀರ್ಮಾನಿಸಿದ್ದೇವೆ.
-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ