Advertisement
ಪ್ರತೀ ತಾಲೂಕುಗಳಲ್ಲಿನ ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳಿಗೆ ಪರ್ಯಾಯವಾಗಿ ಎಷ್ಟು ಮಂದಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು ಎಂಬ ಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಆಯಾ ಶಾಲಾ ಮುಖ್ಯ ಶಿಕ್ಷಕರಿಗೇ ಅತಿಥಿ ಶಿಕ್ಷಕರ ನೇಮಕಾತಿ ಜವಾಬ್ದಾರಿ ವಹಿಸಿದೆ.
Related Articles
Advertisement
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮೇಲೆ ಆ ಶಾಲೆಯಲ್ಲಿ ಖಾಲಿ ಹುದ್ದೆಗೆ ವರ್ಗಾವಣೆಯಾಗಿ ಬಂದ ಶಿಕ್ಷಕರ ಸ್ಥಾನಕ್ಕೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆ ಅತಿಥಿ ಶಿಕ್ಷಕರನ್ನು ತಾಲೂಕಿನ ಒಳಗಿನ ಬೇರೊಂದು ಶಾಲೆಗೆ ನಿಯೋಜಿಸಬೇಕು ಎಂದು ತಿಳಿಸಿದೆ. ಕೋವಿಡ್ ಹಿನ್ನೆಲೆಯಲ್ಲಿ ವಿಳಂಬವಾಗಿ ಶಾಲೆಗಳು ಆರಂಭವಾಗಿದ್ದು ಪಠ್ಯಕ್ರಮ ಪೂರ್ಣಗೊಳಿಸಲು ಅನುವಾಗುವಂತೆ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಅನುಮತಿ ಕೋರಿ ಶಿಕ್ಷಣ ಇಲಾಖೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.ಇದಕ್ಕೆ ಆರ್ಥಿಕ ಇಲಾಖೆ ಅನುಮತಿ ನೀಡಿದ ಮೇರೆಗೆ ಈ ಆಯ್ಕೆ ನಡೆಯುತ್ತಿದೆ.
ಪ್ರಕ್ರಿಯೆ ಪ್ರಗತಿಯಲ್ಲಿ :
ಪುತ್ತೂರು-ಕಡಬ ಶೈಕ್ಷಣಿಕ ತಾಲೂಕಿನಲ್ಲಿ 123 ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ 21 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಸುಳ್ಯ ತಾಲೂಕಿನಲ್ಲಿ 97 ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ 21 ಪ್ರೌಢಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಈಗಾಗಲೇ ಆಸಕ್ತರು ಆಯಾ ಶಾಲೆಗಳಿಗೆ ಅರ್ಜಿ ಸಲ್ಲಿಸಿದ್ದು ಅಲ್ಲಿ ಮುಖ್ಯ ಶಿಕ್ಷಕರು ಅರ್ಹರನ್ನು ಆಯ್ಕೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಕಳುಹಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಹಾಗೂ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ ಉದಯವಾಣಿಗೆ ತಿಳಿಸಿದ್ದಾರೆ.