ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾ.28 ರಂದು ಮಡಿಕೇರಿಗೆ ಆಗಮಿಸಿ ಕಾರ್ಯ ಕರ್ತರ ಸಭೆೆ ನಡೆಸಲಿದ್ದಾರೆ ಎಂದು ತಿಳಿಸಿರುವ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು, ಕೊಡಗು, ಮೈಸೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ತಾವು ಜೆಡಿಎಸ್ ಜಿಲ್ಲಾಧ್ಯಕ್ಷನಾಗಿ ಪದಗ್ರಹಣ ಮಾಡುವುದಾಗಿ ಹೇಳಿದರು. ಮಾ.28ರಂದು ಬೆಳಗ್ಗೆ 10 ಗಂಟೆಗೆ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯ ಮಂತ್ರಿಗಳ ಮೆರವಣಿಗೆ ನಡೆಯಲಿದ್ದು, ಅನಂತರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಗೆಸ್ಟ್‌ಹೌಸ್ ಮೈದಾನದಲ್ಲಿ ಕಾರ್ಯಕರ್ತರ ಸಭೆೆ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಮಂಡ್ಯ ಉಸ್ತುವಾರಿ ಸಚಿವ ಪುಟ್ಟರಾಜು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಅಖೀಲ ಭಾರತ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್, ಕರ್ನಾಟಕ ಪ್ರದೇಶ ಜೆಡಿಸ್ ಅಲ್ಪಸಂಖ್ಯಾತಕ ಘಟಕದ ಅಧ್ಯಕ್ಷ ಸೈಯ್ಯದ್ ಅಲ್ತಾಫ್, ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಸೇರಿದಂತೆ ಜಿಲ್ಲೆಯ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು. ವರಿಷ್ಟರ ಸೂಚನೆಯಂತೆ ಮೈತ್ರಿ ನಿಲುವಿಗೆ ಬದ್ಧರಾಗಿ ಕೊಡಗು, ಮೈಸೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಒಗ್ಗಟ್ಟಾಗಿ ಶ್ರಮಿಸುವುದಾಗಿ ಗಣೇಶ್ ಇದೇ ಸಂದರ್ಭ ತಿಳಿಸಿದರು. ಈ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಮೈತ್ರಿ ಧರ್ಮವನ್ನು ಪಾಲಿಸುತ್ತೇವೆ. ಇದೇ ಪ್ರಕಾರವಾಗಿ ಕಾಂಗ್ರೆಸಿಗರು ಕೂಡ ಮಂಡ್ಯ ಮತ್ತು ಹಾಸನದಲ್ಲಿ ಕಾರ್ಯ ನಿರ್ವಹಿಸಬೇಕೆಂದರು. ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು.
ಅಲ್ಪಸಂಖ್ಯಾತಕ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ವಿಧಾನಸಭಾ ಚುನಾವಣೆ ಮುಗಿದ ಅನಂತರ ಜಿಲ್ಲೆಯಲ್ಲಿ ಜೆಡಿಎಸ್‌ಗೆ ನಾಯಕತ್ವದ ಕೊರತೆ ಎದ್ದು ಕಾಣುತ್ತಿತ್ತು. ಆದರೆ, ಇದೀಗ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ಹೊಂದಿರುವ ಕೆ.ಎಂ.ಗಣೇಶ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸ್ವಾಗತಾರ್ಹವೆಂದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಕುಸುಮ್ ಕಾರ್ಯಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡೆನ್ನಿ ಬರೋಸ್, ಹಿಂದುಳಿದ ವರ್ಗಗಳ ಅಧ್ಯಕ್ಷ ಎನ್.ಸಿ.ಸುನಿಲ್ ಹಾಗೂ ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷೆ ಲೀಲಾ ಶೇಷಮ್ಮ ಉಪಸ್ಥಿತರಿದ್ದರು.