ನವದೆಹಲಿ: ಬಿಜೆಪಿ, ಜೆಡಿಎಸ್ ನಡುವಿನ ಮೈತ್ರಿ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಸೀಟು ಹಂಚಿಕೆ ಒಪ್ಪಂದದಂತೆ ಕರ್ನಾಟಕದಲ್ಲಿ ಜೆಡಿಎಸ್ ಕೊನೆಗೂ ಮೂರು ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಇದನ್ನೂ ಓದಿ:Arrested: ಭಜನೆ ಕೇಸ್; ಹಲ್ಲೆ ಮಾಡಿದ ಅಪ್ರಾಪ್ತ ಸೇರಿ 6 ಮಂದಿ ಬಂಧನ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಲಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎಚ್.ಡಿ.ದೇವೇಗೌಡರ ಅಳಿಯ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸಲಿದ್ದಾರೆ. ಇಲ್ಲಿ ಕಾಂಗ್ರೆಸ್ ನಿಂದ ಡಿಕೆ ಸುರೇಶ್ ಕಣದಲ್ಲಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ರಣತಂತ್ರ ರೂಪಿಸುವಲ್ಲಿ ಬಿಜೆಪಿ ಮುಖಂಡರು ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದೊಂದು ಸ್ಥಾನ ಗೆದ್ದಿತ್ತು. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜಯ ಸಾಧಿಸಿದ್ದರು.
ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಯೊಂದಿಗೆ ಅಧಿಕಾರದ ಗದ್ದುಗೆಗೆ ಏರಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಎಷ್ಟು ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.