ಚೆನ್ನೈ: ಮೆಡಿಕಲ್ ಪ್ರವೇಶ ಪರೀಕ್ಷೆ(NEET)ಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಮನನೊಂದು ಮೂವರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ನೀಟ್ ಪರೀಕ್ಷೆಯ ಫಲಿತಾಂಶ ಹೊರಬಿದ್ದು ಎರಡು ದಿನದ ಬಳಿಕ ಈ ಘಟನೆ ನಡೆದಿದೆ. ಚೆನ್ನೈನಿಂದ 170 ಕಿಲೋ ಮೀಟರ್ ದೂರದಲ್ಲಿರುವ ವಿಲ್ಲುಪುರಂನ 18 ವರ್ಷದ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಎಂ.ಮೋನಿಶಾ ಎರಡನೇ ಬಾರಿ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದೇನೆ ಎಂದು ನೊಂದುಕೊಂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಳೆದ ವರ್ಷ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲವಾಗಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.
ತಿರುಪುರ್ ನ ವಿದ್ಯಾರ್ಥಿನಿ ರಿತುಶ್ರೀ ನೀಟ್ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಎಂದು ನೇಣಿಗೆ ಶರಣಾಗಿದ್ದಾಳೆ. ಪುದುಕೊಟೈನ ವೈಶ್ಯಾ ಕೂಡಾ ಆತ್ಮಹತ್ಯೆಗೆ ಶರಣಾಗಿರುವುದಾಗಿ ವರದಿ ತಿಳಿಸಿದೆ. ಆದರೆ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಸೂಸೈಡ್ ನೋಟ್ ಸಿಕ್ಕಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಮೂವರು ವಿದ್ಯಾರ್ಥಿನಿಯರ ಆತ್ಮಹತ್ಯೆ ಘಟನೆ ನಂತರ ವಿದ್ಯಾರ್ಥಿ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ. ಮೆಡಿಕಲ್ ಪ್ರವೇಶ ಪರೀಕ್ಷೆಯಿಂದ ರಾಜ್ಯ ಸರ್ಕಾರ ತಮಿಳುನಾಡಿಗೆ ವಿನಾಯ್ತಿ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.