ಮೈಸೂರು: ಕೋವಿಡ್ ಸೋಂಕು ಇತ್ತೀಚೆಗೆ ಗ್ರಾಮೀಣ ಪ್ರದೇಶದಲ್ಲೂ ಹೆಚ್ಚಾಗಿ ಹರಡುತ್ತಿರುವುದರಿಂದ ಪ್ರತಿದಿನ 1700ಕ್ಕೂ ಹೆಚ್ಚು ಟೆಸ್ಟ್ ಮಾಡಲಾಗುತ್ತಿದ್ದು, ಶೇ.30ರಷ್ಟು ಪಾಸಿಟಿವ್ ಕೇಸ್ ಗಳು ಪತ್ತೆಯಾಗುತ್ತಿವೆ ಎಂದು ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಡಿ.ಭಾರತಿ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲೂ ಕೋವಿಡ್ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುತ್ತಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಆಯಾ ಪಂಚಾಯಿತಿ ಮಟ್ಟದಲ್ಲಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಎಲ್ಲಾ ತಾ. ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಬೆಡ್‌ಗಳನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲಾಗಿದೆ. ಜೊತೆಗೆ ತಾಲೂಕು ಆಸ್ಪತ್ರೆಗಳಲ್ಲಿ ಹೆಚ್ಚುವರಿ ಸಿಬ್ಬಂದಿ ಗಳ ನೇಮಕ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಹಾಗೆಯೇ ಗ್ರಾಮೀಣ ಭಾಗದ ಪಾಸಿಟಿವ್ ಪ್ರಕರಣಗಳಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮೀಣ ಭಾಗದ ಸೋಂಕಿತರಿಗೆ ಹೋಂ ಐಸೊಲೇಷನ್ ವ್ಯವಸ್ಥೆ ಇರುವುದಿಲ್ಲ. ನಂಜನ ಗೂಡು ಹಾಗೂ ತಿ. ನರಸೀಪುರ ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಇದೆ. ಸೋಂಕಿನ ಲಕ್ಷಣಗಳಿರುವ ಎಲ್ಲರೂ ಸ್ಥಳೀಯ ಆಸ್ಪತ್ರೆಗೆ ತೆರಳಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಎಲ್ಲರೂ ಮನೆ ಮನೆಗಳಲ್ಲಿಯೇ ಇದ್ದು ಟೀವಿಗಳಲ್ಲಿ ದಸರಾ ನೋಡಿ. ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗುತ್ತದೆ. ಗ್ರಾಮೀಣ ಭಾಗದ ಜನರು ನಗರಕ್ಕೆ ಬಂದು ಕೋವಿಡ್ ಹಬ್ಬಲು ಅವಕಾಶ ಮಾಡಿಕೊಡಬೇಡಿ. 60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ ಮಕ್ಕಳು ಅನಾವಶ್ಯಕವಾಗಿ ಓಡಾಡುವುದನ್ನು ನಿಲ್ಲಿಸಿ ಎಂದು ಅವರು ಮನವಿ ಮಾಡಿದ್ದಾರೆ.
ದಯವಿಟ್ಟು ದಸರಾಗೆ ಬರಬೇಡಿ: ಭಾರತಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂಂದಗ್ರಾಮೀಣ ಭಾಗದ ಜನತೆ ದಯವಿಟ್ಟು ದಸರಾಗೆ ಬರಬೇಡಿ. ಈ ಬಾರಿ ಸರಳ ದಸರಾವಾದ್ದರಿಂದ ಜಂಬೂಸವಾರಿ ಮೆರವಣಿಗೆ ಇರುವುದಿಲ್ಲ. ತಾಂತ್ರಿಕ ತಂಡದ ವರದಿಯಂತೆ ಅರಮನೆಯಲ್ಲಿ ಮಾತ್ರ ಜಂಬೂಸವಾರಿ ನಡೆಯಲಿದೆ. ಅರಮನೆ ಒಳಗೆ 300 ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಸಾರ್ವಜನಿಕರಿಗೆ ನೇರವಾಗಿ ಜಂಬೂಸವಾರಿ ನೋಡುವ ಅವಕಾಶ ಇರುವುದಿಲ್ಲ. ಹಾಗಾಗಿ ಅನಾವಶ್ಯಕವಾಗಿ ಗ್ರಾಮೀಣ ಪ್ರದೇಶದ ಜನರು ನಗರಕ್ಕೆ ಬರಬೇಡಿ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಿ. ಭಾರತಿ ಮನವಿ ಮಾಡಿದರು.