Advertisement

34 ಜನರ ದುರ್ಮರಣ,136 ಪ್ರಮುಖ ರಸ್ತೆಗಳ ಸಂಪರ್ಕ ಕಡಿತ, 4.15 ಲಕ್ಷ ಹೆಕ್ಟೇರ್ ಕೃಷಿ ಹಾನಿ

08:33 AM Aug 12, 2019 | Team Udayavani |

ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದರು.

Advertisement

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ಭಾನುವಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ರಾಜ್ಯದಲ್ಲಿ ಮಳೆಯ ವಿವರ ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟದ ಕುರಿತು ಮಾಹಿತಿ ಒದಗಿಸಿದರು.

ರಾಜ್ಯದಲ್ಲಿ ರವಿವಾರ ಆರೇಂಜ್ ಅಲರ್ಟ್ ಘೋಷಿಸಲಾಗಿದ್ದು, ನಾಳೆ ಹಳದಿ ಅಲರ್ಟ್ ಇರಲಿದೆ. ರವಿವಾರ ಸ್ಥಿತಿ ಸಾಮಾನ್ಯವಾಗಿದ್ದು, ನಾಳೆ ಇಡೀ ರಾಜ್ಯದಲ್ಲಿ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬರಲಿದೆ ಎಂದು ಮುಖ್ಯ ಕಾರ್ಯದರ್ಶಿಗಳು ತಿಳಿಸಿದರು.

ಬೆಳಗಾವಿ ಸೇರಿದಂತೆ ರಾಜ್ಯದಾದ್ಯಂತ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್. ವಾಯುಸೇನೆ, ಪೊಲೀಸ್ ಸೇರಿದಂತೆ ವಿವಿಧ ರಕ್ಷಣಾ ತಂಡಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಪ್ರಾಥಮಿಕ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇದುವರೆಗೆ 34 ಜನರು ಮೃತಪಟ್ಟಿದ್ದು, ಪ್ರವಾಹ ಹಾಗೂ ಮಳೆಯಿಂದಾಗಿ ಮರಣ ಹೊಂದಿದವರ ಕುಟುಂಬದವರಿಗೆ 48 ಗಂಟೆಗಳಲ್ಲಿ ಐದು ಲಕ್ಷ ರೂಪಾಯಿ ಪರಿಹಾರದ ಚೆಕ್ ನೀಡಲಾಗುತ್ತಿದೆ.

Advertisement

ಪರಿಹಾರ ಕೇಂದ್ರಗಳನ್ನು ಆರಂಭಿಸಿ ಸಂತ್ರಸ್ತ ಜನರಿಗೆ ಊಟ, ವಸತಿ ಮತ್ತು ಬಟ್ಟೆಗಳನ್ನು ಒದಗಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಕೂಡ ನೀಡಲಾಗುತ್ತಿದ್ದು, ಇದಲ್ಲದೇ ಜಾನುವಾರುಗಳಿಗೂ ಆಶ್ರಯ ಒದಗಿಸಿದ್ದು, ಮೇವು ವಿತರಣೆ ಮಾಡಲಾಗುತ್ತಿದೆ ಎಂದರು. ಈವರೆಗೆ 3 ಲಕ್ಷಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ.

100 ಕೋಟಿ ಬಿಡುಗಡೆ: ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಗಳಲ್ಲಿ ತಕ್ಷಣವೇ ಪರಿಹಾರ ಮತ್ತು ಪುನರ್ವಸತಿ ಕಾರ್ಯ ಕೈಗೊಳ್ಳಲು ಈಗಾಗಲೇ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿರುತ್ತದೆ ಎಂದು ತಿಳಿಸಿದರು.

ಪ್ರಾಥಮಿಕ ಸಮೀಕ್ಷೆ ಪ್ರಕಾರ ಪ್ರವಾಹ ಪೀಡಿತ ವಿವಿಧ ಜಿಲ್ಲೆಗಳಲ್ಲಿ 4.15 ಲಕ್ಷ ಹೆಕ್ಟೇರ್ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

136 ಪ್ರಮುಖ ರಸ್ತೆಗಳ ಸಂಪರ್ಕ ಕಡಿತಗೊಂಡಿತ್ತು. ರಾಷ್ಟ್ರೀಯ ಹೆದ್ದಾರಿ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ರಸ್ತೆಗಳು ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾಗಿವೆ.

ರಸ್ತೆ, ಸೇತುವೆ, ಶಾಲೆಗಳು, ಪೈಪ್ ಲೈನ್ ವಿದ್ಯುತ್ ಕಂಬಗಳು ಸೇರಿದಂತೆ ಮೂಲಭೂತ ಸೌಕರ್ಯಗಳ ಹಾನಿಯ ಸಮೀಕ್ಷೆ ಪ್ರಗತಿಯಲ್ಲಿದೆ ಎಂದು ವಿವರಿಸಿದರು.


ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ ಕಳಸದ, ಲಕ್ಷ್ಮೀನಾರಾಯಣ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಐಜಿಪಿ ಎಚ್.ಜಿ.ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯತ ಸಿಇಓ ಡಾ.ರಾಜೇಂದ್ರ ಕೆ.ವಿ. ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next