Advertisement

ಎಂಡೋ ಸಂತ್ರಸ್ತರಿಗೆ ಇನ್ನೂ 4 ಪಾಲನ ಕೇಂದ್ರ: ಡಿಸಿ

04:45 AM Jan 03, 2019 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್‌ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಲು ಇನ್ನೂ 4 ಪಾಲನ ಕೇಂದ್ರಗಳನ್ನು ಹೆಚ್ಚುವರಿಯಾಗಿ ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್‌ ಹೇಳಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಎಂಡೋಸಲ್ಫಾನ್‌ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. 

ಕೊಕ್ಕಡ ಹಾಗೂ ಕೊಯಿಲದಲ್ಲಿ ಈಗಾಗಲೇ ಪಾಲನ ಕೇಂದ್ರ ಕಾರ್ಯಾಚರಿಸುತ್ತಿವೆ. ಇದರೊಂದಿಗೆ ಹೆಚ್ಚುವರಿಯಾಗಿ ಪುತ್ತೂರು ತಾಲೂಕಿನ ಪಾಣಾಜೆ, ಸುಳ್ಯ ತಾಲೂಕಿನ ಬೆಳ್ಳಾರೆ, ಬೆಳ್ತಂಗಡಿ ತಾಲೂಕಿನ ಕಣಿಯೂರು ಹಾಗೂ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಕೇಂದ್ರ ತೆರೆಯಲಾಗುವುದು. ಇಲ್ಲಿ ಎಂಡೋ ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒಂದೇ ಕಡೆ ನೀಡಲಾಗುವುದು ಎಂದು ತಿಳಿಸಿದರು.

 ಶೇ. 25ಕ್ಕಿಂತ ಕಡಿಮೆ ಎಂಡೋಸಲ್ಫಾನ್‌ ಪೀಡಿತರು 556 ಮಂದಿ ಇದ್ದು, ಈ ಪೈಕಿ 52 ಮಂದಿ ಕ್ಯಾನ್ಸರ್‌ನಿಂದ ಬಳಲುತ್ತಿರುವುದು ಪತ್ತೆಯಾಗಿದೆ. ಇವರಿಗೆ ಮಾಸಿಕ ಮಿತ ವೇತನ ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಇದೇ ವೇಳೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. 

ಎಂಡೋ ಸಂತ್ರಸ್ತರಿಗೆ ಪೌಷ್ಟಿಕ ಆಹಾರ ಒದಗಿಸಲು ವಿಶೇಷ ಪ್ಯಾಕೇಜ್‌ ಅಡಿ ಮಂಜೂರಾತಿ ನೀಡಲು ಅಗತ್ಯ ಪ್ರಸ್ತಾವನೆ ಸಲ್ಲಿಸಲು ಅವರು ಆಹಾರ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು. ಖಾಸಗಿ ವೈದ್ಯಕೀಯ ಕಾಲೇಜುಗಳ ಮೂಲಕ ಎಂಡೋ ಪೀಡಿತ ಪ್ರದೇಶಗಳಲ್ಲಿ ನೀಡುವ ವಿಶೇಷ ತಜ್ಞ ವೈದ್ಯ ಶಿಬಿರಗಳಲ್ಲಿ ರೋಗಿಗಳಿಗೆ ಔಷಧಗಳನ್ನು ತಪಾಸಣೆ ನಡೆಸಿದ ವೈದ್ಯರು ಸ್ಥಳದಲ್ಲಿಯೇ ನೀಡಬೇಕು. ಇದಕ್ಕೆ ಸಂಬಂಧಪಟ್ಟ ವೆಚ್ಚವನ್ನು ಆರೋಗ್ಯ ಇಲಾಖೆಯು ಸಂಬಂಧಪಟ್ಟ ವೈದ್ಯಕೀಯ ಕಾಲೇಜುಗಳಿಗೆ ಮರು ಪಾವತಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು. 

Advertisement

ಜಿ.ಪಂ. ಸಿಇಒ ಡಾ| ಸೆಲ್ವಮಣಿ ಮಾತನಾಡಿ, ಉಜಿರೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಎಂಡೋ ಪೀಡಿತರ ಕೌಶಲ ಕೇಂದ್ರವನ್ನು ಶೀಘ್ರವೇ ಕಾರ್ಯಾರಂಭ ಮಾಡುವಂತೆ ಸೂಚಿಸಿದರು. ದ.ಕ. ಜಿಲ್ಲೆಯಲ್ಲಿ 4,227 ಎಂಡೋಸಲ್ಫಾನ್‌ ಸಂತ್ರಸ್ತರನ್ನು ಗುರುತಿಸಲಾಗಿದೆ. ಈ ಪೈಕಿ 3,519 ಮಂದಿಗೆ ಮಾಸಿಕ ಮಿತ ವೇತನ ಮಂಜೂರಾಗಿದೆ. ಇದುವರೆಗೆ ಎಂಡೋಪೀಡಿತರಾಗಿದ್ದ 152 ಮಂದಿ ಮರಣ ಹೊಂದಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌ ಅವರು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಕುಮಾರ್‌, ಮಂಗಳೂರು ಸಹಾಯಕ ಆಯುಕ್ತ ರವಿಚಂದ್ರ ನಾಯ್ಕ, ಎಂಡೋಸಲ್ಫಾನ್‌ ಪುನರ್ವಸತಿ ಕಾರ್ಯಕ್ರಮಗಳ ನೋಡಲ್‌ ಅಧಿಕಾರಿ ಡಾ| ಅರುಣ್‌ ಕುಮಾರ್‌, ಸಜೀವುದ್ದೀನ್‌ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next