ಉತ್ತರ ಪ್ರದೇಶ: ಕಟ್ಟಡವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮನೆಯ ಕೆಳಭಾಗದಲ್ಲಿ ಎಲೆಕ್ಟ್ರಾನಿಕ್ ವಸ್ತುಗಳ ಘಟಕವೊಂದಿದ್ದು ಇಲ್ಲಿ ಬೆಂಕಿ ಹೊತ್ತಿಕೊಂಡು ಕಟ್ಟಡದ ಮೇಲಿದ್ದ ಮನೆಗೆ ವ್ಯಾಪಿಸಿದೆ ದಟ್ಟ ಹೊಗೆ ಆವರಿಸಿಕೊಂಡು ಮನೆಮಂದಿ ಹೊರಬರಲಾಗದೆ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನಗೊಂಡಿದ್ದಾರೆ ಎಂದು ಫಿರೋಜಾಬಾದ್‌ನ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ತಿವಾರಿ ಹೇಳಿದ್ದಾರೆ.
ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಕೂಡಲೇ ಸ್ಥಳಕ್ಕೆ 18 ಅಗ್ನಿಶಾಮಕ ವಾಹನಗಳು ಧಾವಿಸಿ ಸತತ ಎರಡೂವರೆ ಗಂಟೆಗಳ ಅವಿರತ ಪ್ರಯತ್ನದ ಬಳಿಕ ಬೆಂಕಿ ಹತೋಟಿಗೆ ಬಂದಿದ್ದು ಬಳಿಕ ಕಟ್ಟಡದ ಒಳಗಿದ್ದ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಅಧಿಕಾರಿ ಆಶಿಶ್ ತಿವಾರಿ ಹೇಳಿದ್ದಾರೆ.
ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಸಂಭವಿಸಿರಬಹುದು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು ಸಮಗ್ರ ತನಿಖೆಯ ಬಳಿಕ ಸ್ಪಷ್ಟ ವಿಚಾರ ತಿಳಿದುಬರಲಿದೆ ಎಂದಿದ್ದಾರೆ.
ಮುಖ್ಯಮಂತ್ರಿ ಸಂತಾಪ :
ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಮೃತ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.