ಚೆನ್ನೈ: ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದು, ಕನಿಷ್ಠ 70 ಮಂದಿ ಗಾಯಗೊಂಡ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.
ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ.
ಕಡಲೂರು ಮತ್ತು ಪನ್ರುತಿ ನಡುವೆ ಎರಡು ಖಾಸಗಿ ಬಸ್‌ಗಳು ಸಂಚರಿಸುತ್ತಿದ್ದವು. ಅಪಘಾತಕ್ಕೆ ಕಾರಣಗಳು ತಿಳಿದುಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಒಂದು ಬಸ್‌ನ ಮುಂಭಾಗದ ಟೈರ್ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ಸಾರ್ವಜನಿಕರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದರು. ಅಪಘಾತದಲ್ಲಿ ಎರಡು ಬಸ್‌ಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಪರಿಹಾರ ಘೋಷಣೆ
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.