Advertisement

PWD: ಲೋಕೋಪಯೋಗಿ ಇಲಾಖೆಯಿಂದ 4 ಸಾವಿರ ಕೋಟಿ ರೂ. ಪ್ರಸ್ತಾವನೆ

11:32 PM Nov 06, 2023 | Team Udayavani |

ಬೆಂಗಳೂರು: ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯಿಂದ ಹಣಕಾಸು ಇಲಾಖೆಗೆ 4,000 ಕೋಟಿ ರೂ. ಪ್ರಸ್ತಾವನೆಯನ್ನು ಹೊಸದಾಗಿ ಸಲ್ಲಿಸಲಾಗಿದೆ.

Advertisement

ಇಲಾಖೆ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ 4000 ಕೋಟಿ ರೂ. ಮೊತ್ತದ ಯೋಜನೆಗಾಗಿ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಇದರ ಜತೆಗೆ ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ಸರಕಾರ ಹಾಗೂ ನಬಾರ್ಡ್‌ಗೆ 5000 ಕೋಟಿ ರೂ. ಮೊತ್ತದ ಪ್ರಸ್ತಾಪ ಕಳುಹಿಸಲಾಗಿದ್ದು, ಅನುಮತಿ ಲಭಿಸುವ ನಿರೀಕ್ಷೆ ಇದೆ ಎಂದರು.

38 ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಕೇಂದ್ರ ಸರಕಾರಕ್ಕೆ ಈಗಾಗಲೇ ಅರ್ಜಿ ಸಲ್ಲಿಸಲಾಗಿದೆ. ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇನೆ. ಆದರೆ ನಿರೀಕ್ಷಿತ ಪ್ರತಿಕ್ರಿಯೆ ಲಭಿಸಿಲ್ಲ . ಲೋಕೋಪಯೋಗಿ ಇಲಾಖೆಯಲ್ಲಿ ಈಗಾಗಲೇ 2000 ಕೋಟಿ ರೂ. ಅನುದಾನ ಲಭ್ಯವಿದೆ. ಹಿಂದಿನ ಬಿಜೆಪಿ ಸರಕಾರದ ಬಾಕಿ ಬಿಲ್‌ ಭರಿಸುವುದಕ್ಕೆ 4,000 ಕೋಟಿ ರೂ. ಅಗತ್ಯವಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ನಾನು 2028ಕ್ಕೆ ಕ್ಲೈಮ್‌ ಮಾಡ್ತೇನೆ: ಜಾರಕಿಹೊಳಿ
ಬೆಂಗಳೂರು: ನಾನೇ ಐದು ವರ್ಷ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಾಗಿ ನಾನು ಈ ಹುದ್ದೆಗಾಗಿ 2028ರಲ್ಲಿ ಹಕ್ಕು ಸ್ಥಾಪಿಸುತ್ತೇನೆಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

ಕರ್ನಾಟಕದ ಸಿಎಂಗೆ ಎಷ್ಟು ದಿನ ಅಧಿಕಾರದಲ್ಲಿರುತ್ತೇನೆಂಬ ಬಗ್ಗೆ ಖಾತ್ರಿ ಇಲ್ಲ ಎಂದು ಪ್ರಧಾನಿ ನರೇಂದ್ರ ಚುನಾವಣ ಪ್ರಚಾರ ರ್ಯಾಲಿಯಲ್ಲಿ ಮಾಡಿರುವ ಟೀಕೆಗೆ ಪ್ರತಿಕ್ರಿಯೆ ನೀಡಿದ ಅವರು, ಮೋದಿಯವರು ರಾಜಕೀಯ ಭಾಷಣ ಮಾಡಿದ್ದಾರೆ. ನಮ್ಮ ಪಕ್ಷದಲ್ಲಿ ವಾಕ್‌ ಸ್ವಾತಂತ್ರ್ಯವಿದೆ. ಹೀಗಾಗಿ ಎಲ್ಲರೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

Advertisement

ಸತೀಶ್‌ ಜಾರಕಿಹೊಳಿ ಸಿಎಂ ಆಗುತ್ತಾರೆಂದು ವಾಲ್ಮೀಕಿ ಪ್ರಸನ್ನಾನಂದಪುರಿ ಶ್ರೀಗಳು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ಸಮುದಾಯದ ಪರವಾಗಿ ಹೇಳಿದ್ದಾರೆ. ಈಗ ಯಾವುದೂ ಖಾಲಿ ಇಲ್ಲವಲ್ಲ. ನಾನು 2028ಕ್ಕೆ ಮುಖ್ಯಮಂತ್ರಿ ಹುದ್ದೆಗೆ ಕ್ಲೈಮ್‌ ಮಾಡುತ್ತೇನೆ. ಬೇರೆಯವರು ಕೇಳಿದರೆ ಅವರವರ ಇಷ್ಟ ಎಂದರು. ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಎಂಬ ಹೇಳಿಕೆ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನೆಂಬ ಪ್ರಶ್ನೆಗೆ ಉತ್ತರಿಸಿ, ಈ ವಿಚಾರದಲ್ಲಿ ಪಕ್ಷದ ತೀರ್ಮಾನವೇ ನನ್ನ ತೀರ್ಮಾನ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next