ಬೆಂಗಳೂರು: ಒಲಾ ಮತ್ತು ಉಬರ್ ವಿವಾದ ಬಗೆಹರಿಸುವುದಕ್ಕೆ ಕಂಪನಿಗಳೊಂದಿಗೆ ಸಭೆ ನಡೆಸಿ ಒಮ್ಮತಕ್ಕೆ ಬರಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 4 ವಾರ ಕಾಲಾವಕಾಶ ನೀಡಿದೆ.
ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿ ಸಬೇಕಂದು ರಾಜ್ಯ ಸರ್ಕಾರ ಹೊರಡಿಸಿ ರುವ ಆದೇಶ ರದ್ದುಪಡಿಸುವಂತೆ ಕೋರಿ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ನೇತೃತ್ವದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲರು ಮತ್ತು ಅರ್ಜಿದಾರರ ಪರ ವಕೀಲರ ಮನವಿ ಪರಿಗಣಿಸಿದ ನ್ಯಾಯಪೀಠ, ಒಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಕಲ್ಪಿಸುವ ಸಂಬಂಧ ಎಲ್ಲರ ಜೊತೆ ಸಮಾಲೋಚನಾ ಸಭೆ ನಡೆಸುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸರ್ಕಾರ ತಿಳಿಸಿದೆ.
ಈ ಮಧ್ಯೆ ದರ ಹೆಚ್ಚಿಸುವಂತೆ ಕೋರಿ ಅರ್ಜಿದಾರರು ಮಧ್ಯಂತರ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಸಮಸ್ಯೆ ಬಗೆಹರಿಸಲು ಸರ್ಕಾರದ ಕೋರಿಕೆಯಂತೆ 4 ವಾರಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿತು. ವಿವಾದ ಇತ್ಯರ್ಥಪಡಿಸಲು ಒಲಾ ಮತ್ತು ಉಬರ್ ಕಂಪನಿಗಳೊಂದಿಗೆ ಸಭೆ ನಡೆಸಿ ಒಮ್ಮತಕ್ಕೆ ಬಂದು ನ.7ರೊಳಗೆ ವರದಿ ಸಲ್ಲಿಸುವಂತೆ ನ್ಯಾಯಾಲಯಕ್ಕೆ ಸರ್ಕಾರಕ್ಕೆ 2022ರ ಅ.13ರಂದು ನಿರ್ದೇಶಿಸಿತ್ತು.
ಅದರಂತೆ ಸೋಮವಾರ ವಿಚಾರಣೆಗೆ ಹಾಜರಾಗಿದ್ದ ಸರ್ಕಾರಿ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರೊಂದಿಗೆ ಸಮಾಲೋಚನಾ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸಲು ಸಾರಿಗೆ ಆಯುಕ್ತರು ನಡೆಸಿದ ಸಭೆಯಲ್ಲಿ ಒಮ್ಮತ ನಿಲುವಿಗೆ ಬರಲಾಗಿಲ್ಲ. ನ.14 ಮತ್ತು 15ರಂದು ಸಂಚಾರಿ ಪೊಲೀಸರ ಜೊತೆ ಸಭೆ ಏರ್ಪಡಿಸಲಾಗುತ್ತಿದೆ. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಲಾಗಿದೆ. ಇದಕ್ಕಾಗಿ 4 ವಾರಗಳ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಅದೇ ರೀತಿ ದರ ಹೆಚ್ಚಿಸುವ ಸಂಬಂಧ ಅರ್ಜಿದಾರರ ಮಧ್ಯಂತರ ಮನವಿಗೆ ಮತ್ತು ಅರ್ಜಿಯಲ್ಲಿ ಪ್ರತಿವಾದಿ ಮಾಡಲು ಕೋರಿ “ಭಾರತ್ ಮೋಟಾರು ಸಾರಿಗೆ ಚಾಲಕರ ಸಂಘ’ ಸಲ್ಲಿಸಿರುವ ಆಕ್ಷೇಪಣೆ ಸಲ್ಲಿಸಬೇಕು ಎಂದು ತಿಳಿಸಿ ವಿಚಾರಣೆಯನ್ನು ಡಿ.16ಕ್ಕೆ ಮುಂದೂಡಿತು.