ಹುಬ್ಬಳ್ಳಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಿಲುಕಿಕೊಂಡಿದ್ದ 484 ಜನರನ್ನು ಮಂಗಳವಾರ ಇಲ್ಲಿನ ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದಿಂದ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಗಿಯಿತು. ಇನ್ನೂ ಹೊರ ಜಿಲ್ಲೆಗಳಿಂದ ಆಗಮಿಸಿದ 231 ಜನರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಿಕರು, ಪ್ರವಾಸಿಗರನ್ನು ಅವರ ಜಿಲ್ಲೆಗಳಿಗೆ ತಲುಪಿಸಬೇಕು ಎನ್ನುವ ಸರಕಾರದ ಆದೇಶದ ಮೇರೆಗೆ ಜಿಲ್ಲಾಡಳಿತ ವಾಯವ್ಯ ಸಾರಿಗೆ ಸಂಸ್ಥೆಯ ಬಸ್‌ಗಳ ಮೂಲಕ ಅವರ ಜಿಲ್ಲೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಿದೆ. ನಿಲ್ದಾಣಕ್ಕೆ ಬರುವ ಪ್ರತಿಯೊಬ್ಬರನ್ನು ಆರೋಗ್ಯ ಇಲಾಖೆ ಸಿಬ್ಬಂದಿ ಥರ್ಮಲ್ ಸ್ಕ್ಯಾನಿಂಗ್ ತಪಾಸಣೆಗೊಳಪಡಿಸಿದರು. ಹೊರ ಜಿಲ್ಲೆಗಳಿಗೆ ಹೋಗುವ ಪ್ರತಿಯೊಬ್ಬರ ಮಾಹಿತಿಯನ್ನು ಸಂಗ್ರಹಿಸಲಾಯಿತು.
ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 7:00 ಗಂಟೆಯವರಿಗೆ 20 ಬಸ್ ಗಳಲ್ಲಿ 484 ಜನರನ್ನು ಬೆಂಗಳೂರು, ಕಲಬುರಗಿ, ಹಾಸನ, ಮಂಗಳೂರು, ವಿಜಯಪುರ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಕಳುಹಿಸಲಾಯಿತು. ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು.
ವಿವಿಧ ಜಿಲ್ಲೆಗಳಿಂದ ಆಗಮನ: ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ ಬೆಳಿಗ್ಗೆ 6:00 ರಿಂದ ಸಂಜೆ 6:00 ಗಂಟೆಯವರಿಗೆ 231 ಜನರು ಆಗಮಿಸಿದ್ದು, ಎಲ್ಲರನ್ನು ತಪಾಸಣೆ ಮಾಡಿ 14 ದಿನಗಳ ಹೋಮ್ ಕ್ವಾರಂಟೈನ್‌ಗೆ ಸೂಚಿಸಲಾಗಿದೆ.
ಎಂಡಿ ಭೇಟಿ: ಹೊಸ ಬಸ್ ನಿಲ್ದಾಣದಲ್ಲಿ ನಡೆಯುತ್ತಿದ್ದ ಕಾರ್ಯವನ್ನು ವಾಯವ್ಯ ಸಾರಿಗೆ ವ್ಯವಸ್ಥಾಪಕ ರಾಜೇಂದ್ರ ಚೋಳನ್ ಭೇಟಿ ನೀಡಿ ಪರಿಶೀಲಿಸಿದರು. ಸಾಮಾಜಿಕ ಅಂತರ ಕಾಪಾಡುವ ನಿಟ್ಟಿನಲ್ಲಿ ಗುರುತು ಹಾಕಿಸಲು ಅಧಿಕಾರಿಗಳಿಗೆ ಸೂಚಿಸಿದರು. ಕೂಡಲೇ ಅಧಿಕಾರಿಗಳು ಜನರ ಸರದಿ ಸಾಲಿಗಾಗಿ ಬಣ್ಣದಿಂದ ಗುರುತು ಹಾಕಿಸುವ ಕೆಲಸ ಮಾಡಿಸಿದರು.
ವಾಯವ್ಯ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷಕುಮಾರ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪುರುಷೋತ್ತಮ, ವಿಭಾಗಿಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡ್ರ, ಡಿಟಿಒ ಅಶೋಕ ಪಾಟೀಲ, ಆರೋಗ್ಯ ಇಲಾಖೆ, ವಾಯವ್ಯ ಸಾರಿಗೆ ಸಂಸ್ಥೆ ಸಿಬ್ಬಂದಿ ಕಾರ್ಯನಿರ್ವಹಿಸಿದರು.