ನವದೆಹಲಿ: ಸದನದ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಸಂಸದರ ಅಮಾನತು ಸರಣಿ ಇಂದೂ ಮುಂದುವರೆದಿದ್ದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಇಂದು 49 ಸಂಸದರನ್ನು ಅಮಾನತುಗೊಳಿಸಿದ್ದಾರೆ. ಇದರೊಂದಿಗೆ ಈ ಬಾರಿಯ ಅಧಿವೇಶನದಲ್ಲಿ ಅಮಾನತುಗೊಂಡಿರುವ ಒಟ್ಟು ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದ್ದು, ಇದುವರೆಗಿನ ಗರಿಷ್ಠ ಸಂಖ್ಯೆಯಾಗಿದೆ.
ನ್ಯಾಶನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕರಾದ ಶಶಿ ತರೂರ್ ಮತ್ತು ಕಾರ್ತಿ ಚಿದಂಬರಂ, ಎನ್‌ಸಿಪಿಯ ಸುಪ್ರಿಯಾ ಸುಳೆ ಮತ್ತು ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಅವರು ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಇಂದು ಅಮಾನತುಗೊಳಿಸಿದ್ದಾರೆ.
ಕಳೆದ ವಾರ, ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪದ ಬಗ್ಗೆ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿ ಕಳಪಕ್ಕೆ ಅಡ್ಡಿ ಪಡಿಸುತ್ತಿದ್ದಾರೆ, ಅಲ್ಲದೆ ಶಾ ಹೇಳಿಕೆಗೆ ಒತ್ತಾಯಿಸಿ ವಿರೋಧ ಪಕ್ಷದ ಸಂಸದರು ಸದನದ ಒಳಗೆ ಪ್ರತಿಭಟನೆಯನ್ನೂ ನಡೆಸಿದ ಹಿನ್ನೆಲೆಯಲ್ಲಿ ಕಲಾಪಕ್ಕೆ ಅಡ್ಡಿಯಾಗಿದ್ದು ಈ ನಿಟ್ಟಿನಲ್ಲಿ ಸ್ಪೀಕರ್ ಇಂದು 49 ಸಂಸದರ ಅಮಾನತು ಮಾಡಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ
ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಸಂಸದರು ಸಂಸತ್ ಭವನದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: Corruption Case: ತಮಿಳುನಾಡು ಸಚಿವ ಕೆ.ಪೊನ್ಮುಡಿ ದೋಷಿ…: ಮದ್ರಾಸ್ ಹೈಕೋರ್ಟ್ ತೀರ್ಪು