ಬೆಂಗಳೂರು: ಲೋಕಸಭಾ ಚುನಾವಣೆಯ ಕೆಲಸಗಳನ್ನು ಪೂರ್ಣ ಪ್ರಮಾಣದಲ್ಲಿ ನಿರ್ವಹಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಐವರು ಕಾರ್ಯಾಧ್ಯಕ್ಷರನ್ನು ನೇಮಿಸಿ ಎಐಸಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟನೆ ಹೊರಡಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್ ಸೇಠ್, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಧಾರವಾಡ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ, ವಿಧಾನ ಪರಿಷತ್ತಿನ ಸದಸ್ಯರಾದ ದಕ್ಷಿಣ ಕನ್ನಡದ ಮಂಜುನಾಥ ಭಂಡಾರಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ರಾಯಚೂರಿನ ವಸಂತಕುಮಾರ್ ಅವರು ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಎಐಸಿಸಿ ಐವರು ಕಾರ್ಯಾಧ್ಯಕ್ಷರನ್ನು ಕೆಪಿಸಿಸಿಗೆ ನೇಮಿಸಿತ್ತು. ಅವರಲ್ಲಿ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆ ಚುನಾವಣೆಯಲ್ಲಿ ಗೆದ್ದು, ಸಚಿವರಾಗಿದ್ದಾರೆ. ಜತೆಗೆ ಈ ಮೂವರ ಮಕ್ಕಳು ಲೋಕಸಭಾ ಚುನಾವಣೆಯ ಅಭ್ಯರ್ಥಿಗಳು ಆಗಿದ್ದಾರೆ.
ಸೊರಕೆ ಪ್ರಚಾರ ಸಮಿತಿ ಅಧ್ಯಕ್ಷ
ಮಾಜಿ ಸಂಸದ ಹಾಗೂ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಈ ಮಧ್ಯೆ ಕೋಲಾರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜ್ಯಸಭೆಯ ಮಾಜಿ ಸದಸ್ಯ ಡಾ| ಎಲ್. ಹನುಮಂತಯ್ಯ ಅವರನ್ನು ಪ್ರಚಾರ ಸಮಿತಿಯ ಸಹ ಮುಖ್ಯಸ್ಥರನ್ನಾಗಿ ಮಾಡ ಲಾಗಿದ್ದು, ಈ ಸಮಿತಿಗೆ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಎಂ.ಬಿ. ಪಾಟೀಲ್ ಅವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.