ಕೊಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕಿರಿಯ ವೈದರಿಂದ ನಿರಂತರ ಪ್ರತಿಭಟನೆಗಳು ನಡೆಯುತ್ತಿರುವ ನಡುವೆ ಆರ್‌ಜಿ ಕಾರ್ ಆಸ್ಪತ್ರೆಯ ಐವತ್ತು ಹಿರಿಯ ವೈದ್ಯರು ಸಾಮೂಹಿಕ ರಾಜೀನಾಮೆ ನೀಡಿ ಕಿರಿಯ ವೈದ್ಯರ ಪ್ರತಿಭಟನೆಗೆ ತಮ್ಮ ಬೆಂಬಲ ಸೂಚಿಸಿದ್ದಾರೆ.
ಆಸ್ಪತ್ರೆಯಲ್ಲಿ ವೈದ್ಯರಿಗೆ ಹಾಗೂ ಸಿಬಂದಿಗಳಿಗೆ ಭದ್ರತೆ ಒದಗಿಸಬೇಕು ಹಾಗೂ ಟ್ರೈನಿ ವೈದ್ಯೆಯ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದವರಿಗೆ ಕಠಿಣ ಶಿಕ್ಷೆ ಒದಗಿಸಬೇಕು ಎಂದು ಆಗ್ರಹಿಸಿ ಆಸ್ಪತ್ರೆಯ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ ಈ ನಡುವೆ ಆಸ್ಪತ್ರೆಯ ಐವತ್ತು ಹಿರಿಯ ವೈದ್ಯರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ತಮ್ಮ ಬೆಂಬಲ ಸೂಚಿಸಿದ್ದಾರೆ.
ವೈದ್ಯರು ತಮ್ಮ ಸಾಮೂಹಿಕ ರಾಜೀನಾಮೆಗೆ ಕಾರಣವನ್ನು ವಿವರಿಸಿ ಪಶ್ಚಿಮ ಬಂಗಾಳ ಸರ್ಕಾರದ ವೈದ್ಯಕೀಯ ಶಿಕ್ಷಣ ನಿರ್ದೇಶಕರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ರೋಗಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸದಾ ಪ್ರಯತ್ನಿಸುತ್ತಿದ್ದು, ಪ್ರಸ್ತುತ ಪರಿಸ್ಥಿತಿಯಿಂದ ಗುಣಮಟ್ಟದ ಚಿಕಿತ್ಸೆ ನೀಡಲು ಕಷ್ಟವಾಗುತ್ತಿದೆ. ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಿರಿಯ ವೈದ್ಯರ ಆರೋಗ್ಯ ಕ್ಷಿಪ್ರಗತಿಯಲ್ಲಿ ಹದಗೆಡುತ್ತಿದ್ದು, ಈ ಬಗ್ಗೆ ಯಾವುದೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ, ಮುಷ್ಕರ ನಿರತ ವೈದ್ಯರೊಂದಿಗೆ ಸರ್ಕಾರ ಕೂಡಲೇ ಒಪ್ಪಂದ ಮಾಡಿಕೊಳ್ಳಬೇಕು’ ಎಂದು ವೈದ್ಯರು ಪತ್ರದಲ್ಲಿ ತಿಳಿಸಿದ್ದಾರೆ.