ಬೆಂಗಳೂರು: ನಗರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು 500 ಕೋಟಿ ರೂ. ಮೀಸಲಿಡಬೇಕು. ಕಣ್ಣೂರು ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಗೆ ಅಗತ್ಯ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಸೂಚನೆ ನೀಡಿದರು.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಸೋಮವಾರ ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಿಟಿಗಾನಹಳ್ಳಿ ಮತ್ತು ಮಂಡೂರು ಗ್ರಾಮಗಳಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಕುರಿತ ಸಭೆಯಲ್ಲಿ ಪಾಲಿಕೆ ವತಿಯಿಂದ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿಯಾಗದಿರುವ ಬಗ್ಗೆ ಶಾಸಕರು ಅಳಲು ತೋಡಿಕೊಂಡರು.
ಅದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ 500 ಕೋಟಿ ರೂ. ಮೀಸಲಿಡಬೇಕು. ತ್ಯಾಜ್ಯ ಸಂಸ್ಕರಿಸಿ ವಿದ್ಯುತ್ ಉತ್ಪಾದನೆಗೆ ಹೆಚ್ಚು ಗಮನ ನೀಡಬೇಕು. ಮಂಡೂರು ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಶೇಖರಣೆ ಯಾಗಿರುವ ತ್ಯಾಜ್ಯವನ್ನು ಅಲ್ಲಿಯೇ ಸಂಸ್ಕರಿಸಿ ವಿದ್ಯುತ್ ಉತ್ಪಾದನೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಉಚಿತವಾಗಿ ಕಸ ಕೊಡಿ: ತ್ಯಾಜ್ಯ ವಿಲೇವಾರಿ ಕುರಿತಂತೆ ಅಧಿಕಾರಿಗಳು ಇನ್ನು ಮುಂದೆ ವಾರಕ್ಕೊಮ್ಮೆ ಸಭೆ ನಡೆಸಿ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ತ್ಯಾಜ್ಯ ಸಂಸ್ಕರಿಸಿ ವಿದ್ಯುತ್ ಉತ್ಪಾದಿಸಲು ಆಸಕ್ತಿ ತೋರುವ ಖಾಸಗಿ ಕಂಪೆನಿಗಳಿಗೆ ಉಚಿತವಾಗಿ ಕಸ ನೀಡಬೇಕು ಎಂದು ಸೂಚನೆ ನೀಡಿದರು.
ಕುಡಿಯುವ ನೀರಿಗೆ ಹಣ: ಕಣ್ಣೂರಿನಲ್ಲಿ ತ್ಯಾಜ್ಯ ವಿಲೇವಾರಿಯಿಂದಾಗಿ ಗ್ರಾಮದ ಕೊಳವೆಬಾವಿಗಳು ಕಲುಷಿತಗೊಂಡಿರುವುದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳು ಆಯುಕ್ತರಿಗೆ ಸೂಚಿಸಿದರು. ಮೇಯರ್ ಗೌತಮ್ ಕುಮಾರ್, ಸಂಸದ ಪಿ.ಸಿ.ಮೋಹನ್, ಶಾಸಕ ಅರವಿಂದ ಲಿಂಬಾವಳಿ, ಪಾಲಿಕೆ ಆಯುಕ್ತ ಅನಿಲ್ ಕುಮಾರ್ ಇತರರು ಉಪಸ್ಥಿತರಿದ್ದರು.
ವರದಿ ನೀಡಿ: ತ್ಯಾಜ್ಯ ವಿಲೇವಾರಿ ಸಮಸ್ಯೆ ನಿವಾರಣೆಗೆ ಸಂಬಂಧಪಟ್ಟಂತೆ ವಾರದೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಜತೆಗೆ ತ್ಯಾಜ್ಯ ಸಂಸ್ಕರಣೆಯಿಂದ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣ ಸಂಬಂಧ ಸಮಿತಿಯೊಂದನ್ನು ರಚಿಸಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ಮೇಯರ್ ಗೌತಮ್ ಕುಮಾರ್ ಹೇಳಿದರು. ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆ ಬಳಿಕ ಪ್ರತಿಕ್ರಿಯಿಸಿದ ಅವರು, ಪಾಲಿಕೆ ಆದಾಯವನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಪರಿಶೀಲನೆ ನಡೆಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಮಳಿಗೆ, ಉದ್ದಿಮೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಶೇ.60ರಷ್ಟು ಭಾಗದಲ್ಲಿ ಬಳಸಬೇಕು ಎಂಬುದನ್ನು ಜಾಹೀರಾತು ಉಪವಿಧಿ ನಿಯಮದಲ್ಲಿ ಸೇರ್ಪಡೆ ಮಾಡಲಾಗಿದೆ. ಅದರಂತೆ ನ.1ರೊಳಗೆ ಇದನ್ನು ಪಾಲಿಸುವಂತೆ ಸೂಚಿಸಲಾಗಿದೆ. ಎಲ್‌ಇಡಿ ಫಲಕಗಳಿದ್ದರೆ 15 ದಿನ ಕಾಲಾವಕಾಶ ನೀಡಲಾಗುವುದು. ಇದರಲ್ಲಿ ಪ್ರಚಾರದ ಯಾವುದೇ ಗಿಮಿಕ್ ಇಲ್ಲ ಎಂದು ಹೇಳಿದರು.