ದೊಡ್ಡಬಳ್ಳಾಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಜು. 30, 31ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದ್ದು ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಈ ಮೊದಲು ದೊಡ್ಡಬಳ್ಳಾಪುರದಲ್ಲಿ ಮಾತ್ರ ಸಿಇಟಿ ಪರೀಕ್ಷಾ ಕೇಂದ್ರವಿತ್ತು. ಆದರೆ, ಈ ಬಾರಿ ಕೋವಿಡ್ 19ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹೆಚ್ಚುವರಿ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗಿದೆ. ಜಿಲ್ಲೆಯ ನೆಲಮಂಗಲ ಮತ್ತು ಹೊಸಕೋಟೆಗೆ ಹೆಚ್ಚುವರಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಅವಕಾಶ ದೊರಕಿದೆ.
ಜಿಲ್ಲೆಯ 6 ಪರೀಕ್ಷಾ ಕೇಂದ್ರಗಳಾದ ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು-648, ದೇವರಾಜ ಅರಸು ಪದವಿ ಪೂರ್ವ ಕಾಲೇಜು -288, ಸರ್ಕಾರಿ ಪದವಿ ಪೂರ್ವ ಕಾಲೇಜು -216, ಹೊಸಕೋಟೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು -264, ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು – 264 ಹಾಗೂ ನೆಲಮಂಗಲದ ಬಸವೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜು -408 ಸೇರಿ ಒಟ್ಟು 2088 ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕ ಎಂ.ರಾಮಕೃಷ್ಣ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ಸ್ಯಾನಿಟೈಜರ್ ವ್ಯವಸ್ಥೆ ಇದೆ. ಮಾಸ್ಕ್ ಧರಿಸಿ ಬರುವಂತೆ ಸೂಚಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ವೈದ್ಯಕೀಯ ನೆರವಿನ ವ್ಯವಸ್ಥೆ ಇದೆ. ಮೊದಲ ದಿನ ಬೆಳಗ್ಗೆ 10.30ಕ್ಕೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಕನಿಷ್ಠ 1.30 ತಾಸು ಮುಂಚೆ ಹಾಜರಿರಬೇಕಿದೆ ಎಂದು ತಿಳಿಸಿದ್ದಾರೆ.
ಅನುಕೂಲ: 2015ರಿಂದ ದೊಡ್ಡ ಬಳ್ಳಾಪುರದಲ್ಲಿ ಸಿಇಟಿ ಕೇಂದ್ರ ಆರಂಭವಾಗಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿನ ಸಿಇಟಿ ಕೇಂದ್ರಗಳಿಗೆ ಹೋಗಲು ಬೆಳಗ್ಗೆ 6 ಗಂಟೆಗೆ ಮನೆ ಬಿಡಬೇಕಾಗಿತ್ತು. ಈ ಎಲ್ಲಾ ಕಷ್ಟಗಳು ತಪ್ಪಿವೆ ಎನ್ನುತ್ತಾರೆ ವಿದ್ಯಾರ್ಥಿಗಳು.