ಚಿಕ್ಕಬಳ್ಳಾಪುರ: ಕೋವಿಡ್-19 ರ ಸಂದರ್ಭದಲ್ಲಿ ಸಾರ್ವಜನಿಕರು ಮನೆಯಲ್ಲೇ ಇರುವುದರಿಂದ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಕುಡಿಯುವ ನೀರು ತೊಂದರೆಯಾಗದಂತೆ ಅಧಿಕಾರಿಗಳು ಜಾಗ್ರತೆ ವಹಿಸಿ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲೆಯ ವಿವಿಧ ಇಲಾಖೆಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಗೆ ನೂತನವಾಗಿ 271 ಕೊಳವೆ ಬಾವಿ ಕೊರೆಸಲು 7 ಕೋಟಿ ಹಣ ಬೇಕಿದೆ. ಈ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸುತ್ತೇನೆಂದರು.
ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲು ಆದ್ಯತೆ ನೀಡಬೇಕೆಂದರು. ಹಣಕಾಸಿನ ಇತಿಮಿತಿ ನೋಡಿ ಹೊಸ ಕೊಳವೆಬಾವಿ ಕೊರೆಸಲು ಎರಡನೇ ಪ್ರಾಶಸ್ತ್ಯ ನೀಡಿ ಇವೆರಡರ ನಂತರ ಟ್ಯಾಂಕರ್‌ಗಳಿಗೆ ಆದ್ಯತೆ ನೀಡಬೇಕೆಂದರು.
275 ಗ್ರಾಮಗಳಲ್ಲಿ ನೀರಿಗೆ ಬರ: ಸಭೆಯಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 275 ಸಮಸ್ಯಾತ್ಮಕ ಗ್ರಾಮಗಳಿವೆ. 111 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ. ಉಳಿದ ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಒಇ ಬಿ.ಫೌಝೀಯಾ ತರುನ್ನುಮ್, ಅಪರ ಜಿಲ್ಲಾಧಿಕಾರಿ ಆರತಿ, ಉಪ ವಿಭಾಗಾಧಿಕಾರಿ ರಘುನಂದನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.