ಭೋಪಾಲ್:ಎರಡು ಅಂತಸ್ತಿನ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಏಳು ಮಂದಿ ಸಜೀವವಾಗಿ ದಹನವಾದ ದಾರುಣ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಸ್ವರ್ಣ್ ಬಾಗ್ ಕಾಲೋನಿಯಲ್ಲಿ ಶನಿವಾರ (ಮೇ 07) ನಸುಕಿನ ವೇಳೆ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:‘ಅವತಾರ ಪುರುಷ’ ಚಿತ್ರ ವಿಮರ್ಶೆ; ಮಾಯಾ ಪುರುಷನ ತಂತ್ರ ಅವತಾರ
ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಾಥಮಿಕ ತನಿಖೆಯ ಮಾಹಿತಿ ಪ್ರಕಾರ, ಬಿಲ್ಡಿಂಗ್ ನೊಳಗಿದ್ದ ವಿದ್ಯುತ್ ಮೀಟರ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಕಟ್ಟಡದೊಳಕ್ಕೆ ವ್ಯಾಪಿಸಿರುವುದಾಗಿ ತಿಳಿಸಿದೆ.
ಘಟನೆ ಕುರಿತು ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸುಮಾರು ಮೂರು ಗಂಟೆಗಳ ಕಾರ್ಯಾಚರಣೆ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ವರದಿ ವಿವರಿಸಿದೆ.
ಐದು ಶವಗಳನ್ನು ಹೊರ ತೆಗೆಯಲಾಗಿದ್ದು, ಐವರನ್ನು ರಕ್ಷಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ, ಇಬ್ಬರು ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿರುವವರ ಗುರುತನ್ನು ಇನ್ನಷ್ಟೇ ಪತ್ತೆಹಚ್ಚಬೇಕಾಗಿದೆ. ಕಟ್ಟಡದೊಳಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ.