ಮೈಸೂರು: ನಾಡಿನ ಜನತೆಗೆ ಗುಣಮಟ್ಟದ ಮತ್ತು ನಿರಂತರ ವಿದ್ಯುತ್ ಪೂರೈಕೆ ಹಾಗೂ ರೈತರಿಗೆ ಏಳು ಗಂಟೆ ವಿದ್ಯುತ್ ಪೂರೈಕೆ ಮಾಡುವುದು ಸರಕಾರ ಮತ್ತು ಇಂಧನ ಇಲಾಖೆಯ ಮೊದಲ ಆದ್ಯತೆಯಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿ. ವತಿಯಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಮತ್ತು ಕೊಡಗು ಜಿಲ್ಲೆಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಇಂಧನ ಇಲಾಖೆಯನ್ನು ಜನಸ್ನೇಹಿಯಾಗಿ ಮಾಡುವ ನಿಟ್ಟಿನಲ್ಲಿ ಹತ್ತಾರು ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಲಾಗಿದೆ. ರಾಜ್ಯದ ಎಲ್ಲ ಎಸ್ಕಾಂಗಳಲ್ಲಿ ರೈತರು, ಗ್ರಾಹಕರು ಹಾಗೂ ಕೈಗಾರಿಕಾ ಕ್ಷೇತ್ರಗಳಿಗೆ ಗುಣಮಟ್ಟದ ಮತ್ತು ನಿರಂತರ ವಿದ್ಯುತ್ ಪೂರೈಕೆ ಮಾಡುವಲ್ಲಿ ನಿರತವಾಗಿದೆ ಎಂದರು.
ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಈಗಾಗಲೇ ಬೆಳಕು ಯೋಜನೆ ಜಾರಿಗೆ ತರುವ ಮೂಲಕ ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೆ ವಿದ್ಯುತ್ ನೀಡಲಾಗಿದೆ. ಪ್ರಧಾನಿ ಮೋದಿ ಅವರು ಎಲ್ಲ ಗ್ರಾಮಗಳಿಗೂ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು ಎಂಬ ಕಲ್ಪನೆ ಹುಟ್ಟುಹಾಕಿದರು. ಅದರ ಭಾಗವಾಗಿ ರಾಜ್ಯದಲ್ಲಿ 2.5 ಲಕ್ಷ ಮನೆಗಳಿಗೆ ಒಂದೂವರೆ ವರ್ಷದ ಅವಧಿಯಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದರು.
ರಾಜ್ಯದ ಜನರು ಗುಣಮಟ್ಟದ ವಿದ್ಯುತ್ ಮತ್ತು ನಿರಂತರ ವಿದ್ಯುತ್ ನೀಡಿ ಎನ್ನುತ್ತಾರೆಯೇ ಹೊರತು ಉಚಿತ ವಿದ್ಯುತ್ ಬೇಕು ಎಂದು ಜನ ಕೇಳುತ್ತಿಲ್ಲ. ಕೆಲವರು ಉಚಿತ ಹೇಳಿಕೆಗಳನ್ನು ಕೊಡುವ ಮೂಲಕ ಎಸ್ಕಾಂಗಳ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.
-ವಿ. ಸುನಿಲ್ ಕುಮಾರ್, ಇಂಧನ ಸಚಿವ