ಲಕ್ನೋ:ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಆ್ಯಂಬುಲೆನ್ಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ (ಮೇ 31) ಬೆಳಗ್ಗೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಇದನ್ನೂ ಓದಿ:ದಾಂಪತ್ಯ ಜೀವನಕ್ಕೆ ಕಾಲಿಟ್ಟ ಇಂಗ್ಲೆಂಡ್ ಮಹಿಳಾ ಕ್ರಿಕೆಟಿಗರಾದ ನತಾಲಿಯಾ -ಕ್ಯಾಥರಿನ್ ಬ್ರಂಟ್
ಒಂದೇ ಕುಟುಂಬದ ಆರು ಮಂದಿ ದೆಹಲಿಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆ್ಯಂಬುಲೆನ್ಸ್ ನಲ್ಲಿ ಪಿಲ್ಭಿಟ್ ಗೆ ವಾಪಸ್ ಆಗುತ್ತಿದ್ದ ವೇಳೆಯಲ್ಲಿ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಅತಿಯಾದ ವೇಗದಿಂದಾಗಿ ಆ್ಯಂಬುಲೆನ್ಸ್ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಗೆ ಹೊಡೆದು ನಂತರ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿರುವವರ ಗುರುತು ಪತ್ತೆ ಮಾಡಿದ್ದು, ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಕುಟುಂಬ ಸದಸ್ಯರು ಆಗಮಿಸಿದ ನಂತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.
ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.