ನವದೆಹಲಿ:ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿ ಹಾಗೂ 35ಎ ವಿಧಿಯನ್ನು ರದ್ದುಗೊಳಿಸುವ ಮೂಲಕ ಉಕ್ಕಿನ ಮನುಷ್ಯ ಎಂದೇ ಹೆಸರಾಗಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಕನಸನ್ನು ನನಸು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ಕೆಂಪುಕೋಟೆಯ ಮೇಲೆ 73ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಎರಡನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಕೆಂಪು ಕೋಟೆಯ ಮೇಲೆ 6ನೇ ಬಾರಿ ಧ್ವಜಾರೋಹಣ ನೆರವೇರಿಸಿದ ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಸರಕಾರ 2ನೇ ಬಾರಿ ಅಧಿಕಾರಕ್ಕೆ ಬಂದ 10 ವಾರಗಳೊಳಗೆ ಎಲ್ಲಾ ವಿಧದಲ್ಲಿಯೂ ಅಭಿವೃದ್ಧಿಯತ್ತ ಹೆಜ್ಜೆ ಇಟ್ಟಿದ್ದೇವೆ ಎಂದರು.
ದೇಶದ ಜನರು ನಮಗೆ ಮತ್ತೊಮ್ಮೆ ಅಧಿಕಾರ ನಡೆಸಲು ಪೂರ್ಣಪ್ರಮಾಣದ ಬಹುಮತ ನೀಡಿದ್ದಾರೆ. ಈ ನಿಟ್ಟಿನಲ್ಲಿ ನಾವು ವಿಳಂಬ ಮಾಡದೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕಾಗಿದೆ. ಪ್ರತಿಯೊಂದು ವಲಯದಲ್ಲಿಯೂ ನಾವು ಮುಖ್ಯವಾದ ಕ್ರಮಗಳನ್ನು ಕೈಗೊಂಡಿದ್ದೇವೆ. ಇದರಲ್ಲಿ ಜಮ್ಮು-ಕಾಶ್ಮೀರ, ಲಡಾಖ್ ಹಾಗೂ ತ್ರಿವಳಿ ತಲಾಖ್ ಕೂಡಾ ಸೇರಿದೆ ಎಂದರು.