ಬೆಂಗಳೂರು : ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯಜ್ಯೋತಿ, ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಯೋಜನೆಯನ್ನು ಸರ್ಕಾರ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಹಿಂಪಡೆಯಲಾಗಿದೆ ಎಂದು ಕೆಲ ಸಾಮಾಜಿಕ ಜಾಲತಾಣಗಳು, ದಿನಪತ್ರಿಕೆಗಳಲ್ಲಿ ಪ್ರಕಟವಾಗಿದ್ದು, ಈ ಸಂಬಂಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬದವರಿಗೆ “ಅಮೃತ ಜ್ಯೋತಿ” ಕಾರ್ಯಕ್ರಮದಡಿ 75 ಯೂನಿಟ್‍ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ಹಿಂಪಡೆದಿರುವುದಿಲ್ಲವೆಂದು ಇಂಧನ ಇಲಾಖೆಯು ಸ್ಪಷ್ಟಪಡಿಸಿದೆ.
ಈ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಗಸ್ಟ್ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು ಭಾಗಶ: ಪರಿಷ್ಕರಿಸಿದ್ದರಿಂದ ಸುತ್ತೋಲೆಯನ್ನು ಸೆಪ್ಟೆಂಬರ್ 3, 2022 ರಂದು ಹಿಂಪಡೆಯಲಾಗಿದೆಯೇ ಹೊರತು, ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಇಂಧನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬಿಪಿಎಲ್ ಕುಟುಂಬದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಗ್ರಾಹಕರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ವಿದ್ಯುತ್ ಯೋಜನೆಯನ್ನು ರಾಜ್ಯ ಸರಕಾರದ ಮೇ 18, 2022 ರಂದು ರಾಜ್ಯಾದ್ಯಂತ ಜಾರಿಗೆ ತಂದಿತ್ತು.ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂಬ ತಪ್ಪು ಮಾಹಿತಿಯು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಇಲಾಖೆ ತಿಳಿಸಿದೆ.
ಈ ಯೋಜನೆಯ ಪ್ರಯೋಜನ ಸುಮಾರು 39 ಲಕ್ಷ ಬಿಪಿಎಲ್ ಕುಟುಂಬಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗ್ರಾಹಕರಿಗೆ ಸಿಗಲಿದ್ದು, ಈಗಾಗಲೇ 4 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ.ಮೇ ಮತ್ತು ಜೂನ್ ತಿಂಗಳ ವಿದ್ಯುತ್ ಬಿಲ್ ಮೊತ್ತವನ್ನು ವನ್ನು ಸುಮಾರು 15000 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಮರುಪಾವತಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.
ಈ ಯೋಜನೆಯನ್ನು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಡಿಬಿಟಿ ವ್ಯವಸ್ಥೆಯಡಿ ಜಾರಿಗೊಳಿಸಲಾಗಿದೆ. ಫಲಾನುಭವಿ ಗ್ರಾಹಕರಿಗೆ ತಾವು ಪಾವತಿಸಿದ ಒಟ್ಟು ವಿದ್ಯುತ್ ಬಿಲ್ಲಿನ ಮೊತ್ತದಲ್ಲಿ 75 ಯೂನಿಟ್‍ಗಳ ವರೆಗಿನ ವಿದ್ಯುತ್ ಶುಲ್ಕದ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತಿದೆ.