ಇಂಫಾಲ: ಮಣಿಪುರದ ಕಾಂಗ್‌ಪೊಕ್ಪಿ ಜಿಲ್ಲೆಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಣಿಪುರ ಪೊಲೀಸರು ಏಳನೇ ಆರೋಪಿಯನ್ನು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಇತರ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಪೊಲೀಸರು ಒಟ್ಟು ಏಳು ಮಂದಿಯನ್ನು ಬಂಧಿಸಿದ್ದಾರೆ.
ಮೇ 4 ರಂದು ನಡೆದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ದೇಶದೆಲ್ಲೆಡೆ ಕಿಚ್ಚು ಹತ್ತಿಕೊಂಡಿದೆ, ದೇಶದಾದ್ಯಂತ ಘಟನೆಯ ಕುರಿತು ಪ್ರತಿಭಟನೆಯನ್ನು ನಡೆಸಲಾಗುತ್ತಿದೆ.
ವೈರಲ್ ಆಗಿರುವ ವಿಡಿಯೋ ಆಧರಿಸಿ ಇನ್ನೂ 14 ಮಂದಿಯನ್ನು ಗುರುತಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮಣಿಪುರ ಪೊಲೀಸರು ಟ್ವೀಟ್ ಮಾಡಿ, “ಈ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಜನರನ್ನು ಇದುವರೆಗೆ ಬಂಧಿಸಲಾಗಿದೆ. ರಾಜ್ಯ ಪೊಲೀಸರು ಹಲವಾರು ಶಂಕಿತ ಅಡಗುತಾಣಗಳ ಮೇಲೆ ದಾಳಿ ಮಾಡುವ ಮೂಲಕ ಉಳಿದ ಅಪರಾಧಿಗಳನ್ನು ಬಂಧಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೆ ಘಟನೆಗೆ ಸಂಬಂಧಿಸಿ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಕೂಡ ಪೊಲೀಸರಿಂದ ಕ್ಷಣ ಕ್ಷಣದ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ ಜೊತೆಗೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಭರವಸೆಯನ್ನು ನೀಡಿದ್ದಾರೆ. ಸಧ್ಯ ಪೊಲೀಸ್ ಬಿಗಿ ಬಂದೋಬಸ್ತ್ ನೀಡಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಶಾಂತವಾಗಿದೆ. ಹೆಚ್ಚಿನ ಪೊಲೀಸ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಉಲ್ಬಣ: ಮೈಸೂರಿನಲ್ಲಿ ಅಧಿಕ ಪ್ರಕರಣ ದಾಖಲು