ಒಡಿಶಾ: ಪ್ರವಾಸಿಗರ ವಾಹನವೊಂದು ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟು ಹಲವು ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 20ರಲ್ಲಿ ಘಾಟಗೋನ್ ವ್ಯಾಪ್ತಿಯ ಬಲಿಜೋಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು ವಾಹನದಲ್ಲಿದ್ದವರು ದೇವರ ದರ್ಶನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಗಾಯಗೊಂಡವರ ಪೈಕಿ ಐವರು ಕಿಯೋಂಜಾರ್ ಜಿಲ್ಲಾಸ್ಪತ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೂವರನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಹದಗೆಟ್ಟಿದೆ.
ಘಟನೆಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಮೃತರ ಸಂಬಂಧಿಕರಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಅಪಘಾತದಲ್ಲಿ ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಗಂಜಾಂ ಜಿಲ್ಲೆಯ ಪುದಮರಿ ಗ್ರಾಮದ ಒಟ್ಟು 20 ಜನರು ತ್ರಾರಿಣಿ ದೇವಿಯ ದರ್ಶನಕ್ಕೆ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದೇವಸ್ಥಾನಕ್ಕೆ ಇನ್ನೇನು ಕೇವಲ ಮೂರು ಕಿಲೋ ಮೀಟರ್ ದೂರವಿರುವಾಗಲೇ ಚಾಲಕ ನಿದ್ರೆಗೆ ಜಾರಿದ್ದು ಅಪಘಾತಕ್ಕೆ ಕಾರಣ ಎಂದು ವಾಹನದಲ್ಲಿದ್ದವರು ಹೇಳಿದ್ದಾರೆ.
ಪ್ರಕರಣಕ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಮುಸ್ಲಿಂ ವೃದ್ಧನ ಮೇಲೆ ದೌರ್ಜನ್ಯ… ಪ್ರಕರಣ ದಾಖಲು