ಉಡುಪಿ: ಮೂಲಸೌಕರ್ಯ ಸುಧಾರಣೆ, ಧಾರ್ಮಿಕ ಮತ್ತು ಬೀಚ್ ಟೂರಿಸಂ ಅಭಿವೃದ್ಧಿ ಪಡಿಸುವ ಮೂಲಕ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಸುವ ಯೋಜನೆಗಳನ್ನು ರೂಪಿಸಿಕೊಂಡಿದ್ದೇವೆ. ಈ ಹಿನ್ನೆಲೆಯಲ್ಲಿ ಎ.17ರಂದು ನಾಮಪತ್ರ ಸಲ್ಲಿಸಿ, ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದ್ದೇವೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ಎ.17ರ ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ, ಅನಂತರ ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಸಾಗಿ ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಲಾಗುವುದು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಇಡೀ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಒಳಗೊಂಡಿರುವ ಪ್ರಣಾಳಿಕೆಯನ್ನು ಅಂದೇ ಬಿಡುಗಡೆ ಮಾಡಲಿದ್ದೇವೆ ಎಂದು ಶನಿವಾರ ಕಿದಿಯೂರು ಹೊಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಂದಿನ 50 ವರ್ಷದ ಅಭಿವೃದ್ಧಿಯನ್ನು ಮುಖ್ಯವಾಗಿಟ್ಟುಕೊಂಡು ವಿಷನ್ ಪ್ಲಾನ್ ರೀತಿಯಲ್ಲಿ ಪ್ರಣಾಳಿಕೆ ಇರಲಿದೆ. ಕೈಗಾರಿಕೆ ಅಭಿವೃದ್ಧಿ, ಮಲ್ಪೆ ಮೀನುಗಾರಿಕೆ ಬಂದರು ಸಮಗೃ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಪೂರಕವಾಗಿ ಮೂಲಸೌಕರ್ಯಗಳ ಅಭಿವೃದ್ಧಿ, ಉಡುಪಿ ನಗರವನ್ನು ಉತ್ಕೃಷ್ಟ ರೀತಿಯಲ್ಲಿ ಅಭಿವೃದ್ಧಿ ಪಡಿಸಲು ಪೂರಕವಾದ ಯೋಜನೆಗಳು ಮತ್ತು ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುವುದು ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಕಣ್ಣ ಮುಂದಿಟ್ಟುಕೊಂಡು ಪ್ರಣಾಳಿಕೆ ರೂಪಿಸಲಿದ್ದೇವೆ ಎಂದರು.
ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು ಮತ್ತು ಪಕ್ಷದ ಪ್ರಮುಖರಾದ ಅಮೃತ್ ಶೆಣೈ ಪತ್ರಿಕಾಗೋಷ್ಠಿಯಲ್ಲಿದ್ದರು.