Advertisement

ಶೀಘ್ರವೇ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆ: ಸಿಎಂ ಬಸವರಾಜ ಬೊಮ್ಮಾಯಿ

06:52 PM Aug 14, 2022 | Team Udayavani |

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಬೆಂಗಳೂರು ನಗರದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಲು ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಸಭೆಯನ್ನು ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ನ ದಾಸನಪುರ ಹೋಬಳಿಯ ಕಮ್ಮಸಂದ್ರದಲ್ಲಿ 3 ಎಕರೆ 24 ಗುಂಟೆ ಜಮೀನು ಮಂಜೂರು ಮಾಡಿರುವುದಕ್ಕೆ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ನೂರಾರು ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರಿಗೆ ಜಮೀನು ಮಂಜೂರು ಮಾಡಿರುವುದು ಒಂದು ಭಾಗವಾಗಿದೆ. ಉತ್ತರ ಕರ್ನಾಟಕಕ್ಕೆ ಇನ್ನೂ ಸಾಕಷ್ಟು ಕೆಲಸ ಮಾಡಬೇಕಿದೆ. ಆ ಭಾಗದ ಜನರು ಬೆಂಗಳೂರಿಗೆ ಬಂದಾಗ ಉಳಿದುಕೊಳ್ಳಲು ಸೂಕ್ತ ವಸತಿ ವ್ಯವಸ್ಥೆ, ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರು ಹಬ್ಬ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸುಸಜ್ಜಿತ ಸಭಾಭವನ ಸೇರಿದಂತೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವೇ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವುದಾಗಿ ಅವರು ತಿಳಿಸಿದರು.

ಇದನ್ನೂ ಓದಿ: ವಿಜಯಪುರ: ಒಂದೇ ಕುಟುಂಬದ ನಾಲ್ವರು ಸೇರಿ ಜೈಲಿನ 10 ಕೈದಿಗಳ ಬಿಡುಗಡೆ

ಇದೇ ವೇಳೆ, ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಜನರ ಭಾವನೆಗಳಿಗೆ ಸ್ಪಂದಿಸಿ, ನಮ್ಮ ಬೇಡಿಕೆಯನ್ನು ಈಡೇರಿಸಿ ಜಮೀನು ಮಂಜೂರು ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕದ ಎಲ್ಲ ಸಂಘ ಸಂಸ್ಥೆಗಳ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

Advertisement

ಜಮೀನು ನೀಡುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಿ ರುವ ಮುಖ್ಯಮಂತ್ರಿಗಳಿಗೆ ಧನ್ಯವಾದಗಳನ್ನು ಸಮಗ್ರ ಉತ್ತರ ಕರ್ನಾಟಕ ಜನತೆಯ ಪರವಾಗಿ ಅರ್ಪಿಸುವುದಾಗಿ ಮೇಟಿ ತಿಳಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ಹಾಗೂ ಆಸಕ್ತಿ ಹೊಂದಿರುವ ಮುಖ್ಯಮಂತ್ರಿಗಳು ನಮ್ಮ ಭಾಗದ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದು, ಅವರ ನಾಯಕತ್ವದಲ್ಲಿಯೇ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಉಪಾಧ್ಯಕ್ಷ ಬಸವರಾಜ ಬೀಳೂರು, ಮಹಾ ಸಂಸ್ಥೆಯ ನಿರ್ದೇಶಕರುಗಳಾದ ವಿ.ಎಸ್. ನೆಗಳೂರು, ಗಂಗಾಧರ ವಾಲಿ, ಗುರುಲಿಂಗಸ್ವಾಮಿ ಹೊಳಿಮಠ, ಶ್ರೀಧರ ಕಲ್ಲೂರ, ಅಯ್ಯನಗೌಡ ಬಿರಾದಾರ, ಲಿಂಗನಗೌಡ ಗೌಡರ, ಮಾರುತಿ ತೋಟದ, ಶಂಕರ ಪಾಗೋಜಿ ಹಾಗೂ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಂಗ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next