Advertisement

ಡಿಸೆಂಬರ್‌ 3 ರಂದು ಸಮನ್ವಯ ಸಮಿತಿ ಸಭೆ

06:40 AM Nov 30, 2018 | Team Udayavani |

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿನ ಗೊಂದಲಗಳ ನಿವಾರಣೆಗೆ ಡಿಸೆಂಬರ್‌ 3 ರಂದು ಸಮನ್ವಯ ಸಮಿತಿ ಸಭೆ ನಡೆಸಲು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಸಂಪುಟ ವಿಸ್ತರಣೆಗೆ, ನಿಗಮ ಮಂಡಳಿ ಅಧ್ಯಕ್ಷರು ಉಪಾಧ್ಯಕ್ಷರ ನೇಮಕ ಹಾಗೂ ಅಧಿಕಾರಿಗಳ ವರ್ಗಾವಣೆಯಲ್ಲಿ ಕಾಂಗ್ರೆಸ್‌ ಶಾಸಕರ ಪತ್ರಗಳಿಗೆ ಮಾನ್ಯತೆ ದೊರೆಯದಿರುವುದು, ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಕಡೆಗಣಿಸುತ್ತಿರುವ ಆರೋಪಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ವಿಶೇಷವಾಗಿ ಸಂಪುಟ ವಿಸ್ತರಣೆಗೆ ಜೆಡಿಎಸ್‌ ಸಿದ್ದವಿದ್ದು, ಕಾಂಗ್ರೆಸ್‌ನಲ್ಲಿ ಗೊಂದಲಗಳಿದ್ದು, ಬೆಳಗಾವಿ ವಿಧಾನ ಮಂಡಲದ ಅಧಿವೇಶನಕ್ಕೂ ಮುಂಚೆ ಸಂಪುಟ ವಿಸ್ತರಣೆ ಮಾಡಬೇಕೆಂಬ ಒತ್ತಾಯ ಕೇಳಿ ಬರುತ್ತಿದ್ದು, ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಮಾಡುವುದು ಎಷ್ಟು ಸೂಕ್ತ ಎನ್ನುವ ಕುರಿತಂತೆಯೂ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಅಲ್ಲದೇ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದರೆ ಯಾವ ರೀತಿ ಎದುರಿಸಬೇಕು ಎಂಬುದರ ಬಗ್ಗೆಯೂ ಸಮನ್ವಯ ಸಮಿತಿಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.

ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆಗೆ ಕಸರತ್ತು ಈಮಧ್ಯೆ, ಬೆಳಗಾವಿ ವಿಧಾನ ಮಂಡಲದ ಅಧಿವೇಶನ ನಡೆಯುವ ಮೊದಲೇ ಸಂಪುಟ ವಿಸ್ತರಣೆ ಮಾಡಲು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌  ಪ್ರಯತ್ನ ನಡೆಸಿದ್ದು ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿದ್ದು ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡುವುದು ಸೂಕ್ತ ಎಂದು ಹೈಕಮಾಂಡ್‌ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ.  

Advertisement

ಆದರೆ, ಉಪ ಮುಖ್ಯಮಂತ್ರಿ ಪರಮೇಶ್ವರ್‌ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧಿವೇಶನಕ್ಕೂ ಮೊದಲು ಸಂಪುಟ ವಿಸ್ತರಣೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬೆಳಗಾವಿ ಅಧಿವೇಶನಕ್ಕೂ ಮೊದಲೇ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಎರಡೂ ಪಕ್ಷಗಳ ನಾಯಕರ ಸಲಹೆ ಪಡೆಯುತ್ತೇವೆ. ಶೀಘ್ರವೇ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿ ಮಾಡುತ್ತೇವೆ.
– ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ.

ಸಂಪುಟ ವಿಸ್ತರಣೆ ವಿಚಾರವನ್ನು ದೊಡ್ಡವರು ನೋಡಿಕೊಳ್ಳುತ್ತಾರೆ. ನನಗೆ ಕೇವಲ ಅಭಿವೃದ್ಧಿ ಕೆಲಸ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಆ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ. ದೊಡ್ಡವರು ಪಟ್ಟಿ ಸಿದ್ದಪಡಿಸಿಕೊಟ್ಟರೆ, ಸಂಪುಟ ವಿಸ್ತರಣೆ ಮಾಡುತ್ತೇನೆ.
– ಎಚ್‌.ಡಿ. ಕುಮಾರಸ್ವಾಮಿ, ಮುಖ್ಯಮಂತ್ರಿ.

Advertisement

Udayavani is now on Telegram. Click here to join our channel and stay updated with the latest news.

Next