Advertisement
ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಮೀಕ್ಷಾ ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಸರ್ಕಾರವು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾಮಾಜಿಕ ಜಾಲತಾಣಗಳು ಮತ್ತು ಕೆಲ ಮಾಧ್ಯಮಗಳಲ್ಲಿನ ತಪ್ಪು ಮಾಹಿತಿಗಳಿಂದ ಜನರ ಆತಂಕ ಹೆಚ್ಚಾಗಿದೆ. ಕಾರಣ ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
Related Articles
Advertisement
ಮಾಸ್ಕ್ಗಳನ್ನು ಯಾರಾದರೂ ರಸ್ತೆಬದಿ ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ಬಗ್ಗೆ ಡ್ರಗ್ಸ್ ಕಂಟ್ರೋಲರ್ ಮತ್ತು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿದರು. ಜಿಲ್ಲೆಯಲ್ಲಿ ನಡೆಯುವ ಜಾತ್ರೆಗಳು ಮತ್ತು ಹೋಳಿ ಹಬ್ಬದ ಸಂದರ್ಭಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತದೆ. ಆದ್ದರಿಂದ ಈ ಸಂದರ್ಭದಲ್ಲಿ ಸೋಂಕು ತಗುಲದಂತೆ ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾತ್ರೆಗೆ ಬರುವ ಭಕ್ತಾದಿಗಳು ಪರಸ್ಪರ ದೂರದಿಂದಲೇ ಸಂವಹನ ನಡೆಸಬೇಕು. ಹೋಳಿ ಹಬ್ಬದ ಹಿನ್ನಲೆ ರಾಸಾಯನಿಕ ಬಣ್ಣಗಳ ಬದಲಿಗೆ ಜೈವಿಕ ಬಣ್ಣಗಳನ್ನು ಉಪಯೋಗಿಸುವಂತೆ ಜನರಿಗೆ ತಿಳಿಸಬೇಕು ಎಂದು ಹೇಳಿದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಬಿ.ಎನ್ ತುಕ್ಕಾರ ಮಾತನಾಡಿ, ಭಾರತದಲ್ಲಿ 29 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಕೇರಳದಲ್ಲಿ ಕಂಡು ಬಂದಿದ್ದ 3 ಕೊರೊನಾ ಪ್ರಕರಣಗಳಲ್ಲಿ ರೋಗಿಗಳು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಪ್ರಕರಣಗಳನ್ನು ಪತ್ತೆ ಹಚ್ಚಲು ಸೋಂಕಿತರ ರಕ್ತದ ಮಾದರಿಗಳನ್ನು ಪುಣೆ ಮತ್ತು ಬೆಂಗಳೂರಿನ ಪ್ರಯೋಗಾಲಯಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ತೀವ್ರ ಜ್ವರದ ಪ್ರಾರಂಭ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ಎದೆನೋವು, ತೀವ್ರ ಎದೆಬಡಿತ, ಕಿಡ್ನಿ ವೈಫಲ್ಯ, ತಲೆನೋವು, ಗಂಟಲು ನೋವು, ಹಾಗೂ ಭೇದಿ ಇವು ಕೊರೊನಾ ಸೋಂಕಿನ ಲಕ್ಷಣಗಳಾಗಿವೆ. ಸಾಮಾನ್ಯ ಫೋ ಹರಡುವ ರೀತಿಯಲ್ಲಿಯೇ ಕೊರೊನಾ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ ಅಥವಾ ಸೀನಿದಾಗ ಈ ವೈರಸ್‌ಗಳು ಹರಡುತ್ತವೆ. ವೈಯಕ್ತಿಕ ಸ್ವಚ್ಛತೆ ಇಲ್ಲದೇ ಮೂಗು, ಬಾಯಿ ಪದೇ ಪದೆ ಮುಟ್ಟಿಕೊಳ್ಳುವುದರಿಂದ ಸೋಂಕು ಹರಡುವ ಸಾಧ್ಯತೆಗಳಿರುತ್ತವೆ ಎಂದರು.
ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಅಂತಾರಾಷ್ಟ್ರಿಯ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ವೈರಸ್ ಹರಡುವದನ್ನು ತಡೆಯಲು ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಆದರೆ ಸಂಪರ್ಕ ವಿಮಾನಗಳ ಮೂಲಕ ಬರುವ ಪ್ರಯಾಣಿಕರ ಬಗ್ಗೆ ನಿಗಾ ವಹಿಸಬೇಕು ಎಂದರು.
ಸಭೆಯಲ್ಲಿ ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ವಿ.ಮುನ್ಯಾಳ, ಬಿಮ್ಸ್ ನಿರ್ದೇಶಕ ಡಾ. ವಿನಯ ದಾಸ್ತಿಕೊಪ್ಪ ಉಪಸ್ಥಿತರಿದ್ದರು.