ಬೆಳಗಾವಿ: ರಾಜ್ಯದ ಎಲ್ಲ 188 ಕೈಗಾರಿಕಾ ಪ್ರದೇಶಗಳ ಕುರಿತು ಸಮಗ್ರ ಅಧ್ಯಯನ ನಡೆಸಲಾಗುತ್ತಿದ್ದು, ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಮೂಲಸೌಕರ್ಯ ಒದಗಿಸಲಾಗುವುದು ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಏಳು ಜಿಲ್ಲೆಗಳ ಕೈಗಾರಿಕೋದ್ಯಮಿಗಳ ಜತೆ ನಡೆದ ಕೈಗಾರಿಕಾ ಅದಾಲತ್‌ನ ಅಧ್ಯಕ್ಷತೆ ವಹಿಸಿ ಮಾತನಾಡಿ, ಇದರ ಸಂಪೂರ್ಣ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಲಾಗುವುದು ಎಂದರು.
ಕೈಗಾರಿಕಾ ಪ್ರದೇಶಗಳಲ್ಲಿ ರಸ್ತೆ, ನೀರು, ವಿದ್ಯುತ್ ದೀಪ ಮತ್ತಿತರ ಮೂಲಸೌಕರ್ಯ ಒದಗಿಸುವುದರ ಜತೆಗೆ ಉದ್ಯಮದ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಲಾಗುವುದು. ಕೈಗಾರಿಕಾ ಅದಾಲತ್ ಮೂಲಕ ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಅವರ ಸಮಸ್ಯೆ ಆಲಿಸಿ, ಸಮಸ್ಯೆ ಇತ್ಯರ್ಥಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.
ಇದನ್ನೂ ಓದಿ:ಗೋರಖ್‌ನಾಥ ದೇಗುಲ ದಾಳಿ ಆರೋಪಿಗೆ ಹನಿಟ್ರ್ಯಾಪ್?
ಒಂದು ಜಿಲ್ಲೆ ಒಂದು ಉತ್ಪನ್ನಕ್ಕೆ ಆದ್ಯತೆ
ಕೈಗಾರಿಕಾ ವಲಯದಲ್ಲಿ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಜಾರಿಗೆ ಚಿಂತಿಸಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಗೂ ಪ್ರತ್ಯೇಕ ಬೃಹತ್ ಯೋಜನೆ ರೂಪಿಸಲಾಗುವುದು ಎಂದು ಸಚಿವ ನಿರಾಣಿ ತಿಳಿಸಿದರು.