Advertisement

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ

04:26 PM Dec 29, 2023 | Team Udayavani |

ಬೆಂಗಳೂರು: ”ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಬೇಕು. ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡಬೇಕು” ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಬೇಕು ಎಂದು ತಿಳಿಸಿದರು.

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು.ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿಗೆದುರಾಗಿ ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸಬೇಕು.ಈ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಎಂಜಿನಿಯರುಗಳ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸಿಎಂ ಸೂಚನೆ ನೀಡಿದರು.

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರವರಿ ಅಂತ್ಯದ ವೇಳೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜೀವ್‌ ಗಾಂಧಿ ವಸತಿ ನಿಗಮದಡಿ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಬೇಕು.ನಿಗಮದ ವ್ಯಾಪ್ತಿಯಲ್ಲಿ 2133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಲಾಯಿತು.

Advertisement

ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್‌ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಸೀರ್‌ ಅಹ್ಮದ್‌ ಹಾಗೂ ಸರಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next