ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗ ಮೂಡಿಗೆರೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಹುಲಿ ದಾಳಿ ನಿರಂತರವಾಗಿ ಮುಂದುವರಿದಿದೆ.
ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಎಂಬ ಗ್ರಾಮದಲ್ಲಿರುವ ಎಸ್ಟೇಟ್ ನಲ್ಲಿ ನಡೆದಿದೆ.
ಸಂತೋಷ್ ಎಂಬವರಿಗೆ ಸೇರಿದ ಈ ಹಸುವನ್ನು ಹುಲಿ ಕೊಂದಿದೆ. ಉಪವಲಯ ಅರಣ್ಯ ಅಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ನರಭಕ್ಷಕ ಹುಲಿ ಅಲ್ಲಲ್ಲಿ ಹಸುಗಳ ಮೇಲೆ ನಿರಂತರ ದಾಳಿ ನಡೆಸುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಹುಲಿಯನ್ನು ಹಿಡಿಯಬೇಕು ಎಂದು ರೈತರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೆಲಸವಾಗದೇ ಇದ್ದರೆ ಮುಂದಿನ ದಿನಗಳಲ್ಲಿ ತಾಲ್ಲೂಕಿನಲ್ಲಿರುವ ಅರಣ್ಯ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡುತ್ತೇವೆ ಎಂದು ಗ್ರಾಮಸ್ಥರು ಖಡಕ್ ಎಚ್ಚರಿಕೆ ನೀಡಿದ್ದಾರೆ.