ಬೆಂಗಳೂರು: ಪರಿಶಿಷ್ಟ ಜಾತಿ -ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿಗಳ ಸಭೆ ನಡೆಸಿದ ಅವರು, ವಿದ್ಯಾರ್ಥಿ ವೇತನ ಸಕಾಲದಲ್ಲಿ ಪಾವತಿಯಾಗುವಂತೆ ನೋಡಿಕೊಳ್ಳಬೇಕು. ಜೂನ್ ಅಂತ್ಯದೊಳಿಗೆ ಆಧಾರ್ ಸೀಡಿಂಗ್ ಕಾರ್ಯ ಮುಗಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಒಗಳು ಕಡ್ಡಾಯವಾಗಿ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವತ್ಛತೆ, ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯ ಹಾಗೂ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಕೆಲವು ಹಾಸ್ಟೆಲ್‌ಗಳಲ್ಲಿ ಅನಧಿಕೃತವಾಗಿ ಕೆಲವರು ಉಳಿದುಕೊಂಡಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ತಿಳಿಸಿದರು. ಅಲ್ಲದೆ, ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳಡಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸಲು ಸೂಚನೆ ನೀಡಿದರು.
ಪಡಿತರಕ್ಕೆ ಆಧಾರ್ ಲಿಂಕ್: ಪಡಿತರ ಕಾರ್ಡ್‌ಗೆ ಆಧಾರ್ ಲಿಂಕ್ ಗೊಂದಲ ಕುರಿತು ಪ್ರಸ್ತಾಪಿಸಿ, ಪಡಿತರ ಕಾರ್ಡ್‌ಗೆ ಆಧಾರ್ ಕಾರ್ಡ್ ಮತ್ತು ಜಾತಿ ಲಿಂಕ್ ಮಾಡಬೇಕು ಎಂದು ಸೂಚಿಸಲಾಗಿದೆ. ಇದಕ್ಕಾಗಿ ಜನರು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುವ ಸ್ಥಿತಿ ಇದೆ. ಈ ರೀತಿ ಕಷ್ಟ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ತಕ್ಷಣ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.